ನಿಗಮ, ಮಂಡಳಿ ನೇಮಕಾತಿ ಕಗ್ಗಂಟು: ಸಿಎಂ-ಡಿಸಿಎಂ ಭೇಟಿಯಾದ ಸುರ್ಜೇವಾಲಾ, ಒಮ್ಮತ ಮೂಡಿಸಲು ಕಸರತ್ತು!
ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.
ಸಿದ್ದರಾಮಯ್ಯ ಮೊದಲು ಶಾಸಕರನ್ನು ನಿಗಮ, ಮಂಡಳಿಗೆ ನೇಮಿಸುವಂತೆ ಒತ್ತಾಯಿಸುತ್ತಿದ್ದರೆ, ಡಿಕೆಶಿ ಪಕ್ಷದ ಕಾರ್ಯಕರ್ತರಿಗೆ ನೇಮಕಾತಿಯಲ್ಲಿ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಡಿಕೆಶಿ 70:30 ಅನುಪಾತದಲ್ಲಿ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನ ಕಲ್ಪಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನಿಗಮ ಮಂಡಳಿ ನೇಮಕಾತಿ ವಿಚಾರ ಸಂಬಂದ ಸಿಎಂ ಹಾಗೂ ಡಿಸಿಎಂ ನಡುವೆ ತಿಕ್ಕಾಟ ಶುರುವಾಗಿರುವ ಹಿನ್ನೆಲೆಯಲ್ಲಿ ಸುರ್ಜೇವಾಲಾ ಅವರು ಮಧ್ಯಪ್ರವೇಶಿಸಿದ್ದು, ನಿನ್ನೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅಭಿಪ್ರಾಯ ಆಲಿಸಿದರು.
ಸುರ್ಜೇವಾಲಾ ಅವರೊಂದಿಗಿನ ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಿಗಮ ಮಂಡಳಿ ನೇಮಕಾತಿ ಕುರಿತು ಶೀಘ್ರದಲ್ಲೇ ಘೋಷಣೆಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು.
ಶಾಸಕರು ಮತ್ತು ಪಕ್ಷದ ಕಾರ್ಯಕರ್ತರಿಬ್ಬರಿಗೂ ಅವಕಾಶ ಕಲ್ಪಿಸುವ ಕುರಿತು ಒತ್ತಡವಿದ್ದು, 25 ರಿಂದ 30 ಶಾಸಕರು ಹಾಗೂ 10 ರಿಂದ 10 ಪ್ರಮುಖ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಹುದ್ದೆ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮುಂದಿನ ಮಂಗಳವಾರ ಮತ್ತೊಂದು ಸುತ್ತಿನ ಸಭೆ ನಡೆಸಿ, ಬೆಳಗಾವಿ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಘೋಷಣೆಗಳನ್ನು ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
45 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಸ ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಹೆಚ್ಚು ಕಾಲ ಅಧಿಕಾರದಲ್ಲಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಹೇಳಿಕೆ ನೀಡುತ್ತಿರುವುದೂ ಕೂಡ ಪಕ್ಷದ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಹೀಗಾಗಿ ಶಾಸಕರಿಗೆ ಹೆಚ್ಚಿನ ಅವಕಾಶ ನೀಡುವುದರತ್ತ ಕೂಡ ಪಕ್ಷ ಗಮನ ಹರಿಸುತ್ತಿದೆ. ಒಂದು ವೇಳೆ ಅವಕಾಶ ಸಿಗದಿದ್ದಲ್ಲಿ ಪಕ್ಷೇತರರು ಮತ್ತು ಶಾಸಕರು ಬಂಡಾವೇಳುವ ಸಾಧ್ಯತೆಗಳ ಕುರಿತು ಪಕ್ಷದಲ್ಲಿ ಆತಂಕ ಶುರುವಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


