ಸಿಎಂ ಸಿದ್ದರಾಮಯ್ಯರನ್ನು ರೋಮ್ ದೊರೆ ನೀರೋಗೆ ಹೋಲಿಸಿದ ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರೋಮ್ ದೊರೆ ನೀರೋಗೆ ಹೋಲಿಸಿದ್ದು, ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ಇಡೀ ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಮೋಜು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರೋಮ್ ದೊರೆ ನೀರೋಗೆ ಹೋಲಿಸಿದ್ದು, ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು ಇಡೀ ರಾಜ್ಯ ಬರಗಾಲದಿಂದ ತತ್ತರಿಸಿದ್ದರೂ ಮೋಜು ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕಾಂಗ್ರೆಸ್ ನಾಯಕರು ಇನ್ನೂ ಮೋಜಿನ ಮೂಡ್ನಲ್ಲಿದ್ದಾರೆ. ಬರ ಪರಿಸ್ಥಿತಿಯನ್ನು ಲೆಕ್ಕಿಸದೆ ಸಚಿವರು ಹೊಸ ಕಾರುಗಳನ್ನು ಖರೀದಿಸುತ್ತಿದ್ದಾರೆ. ಸಿಎಂ ತಮ್ಮ ಮನೆ ನವೀಕರಣಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆಂದು ಟೀಕಿಸಿದರು.
ಇದಲ್ಲದೆ, ಬರದ ತೀವ್ರತೆಯನ್ನು ನಿರ್ಣಯಿಸಲು ಸಚಿವರು ತಮ್ಮ ಜಿಲ್ಲೆಗಳಿಗೆ ಪ್ರವಾಸ ಮಾಡಿಲ್ಲ . ಬೆಂಗಳೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ನ ವರಿಷ್ಠರ ಸಭೆಯಲ್ಲಿ ಸರ್ಕಾರ ಬರ ಪರಿಹಾರ ಘೋಷಣೆ ಮಾಡುವ ನಿರೀಕ್ಷೆ ಇತ್ತು. ಆದರೆ, ಅವರು ಲೋಕಸಭೆ ಚುನಾವಣೆ ಮತ್ತು ಮಂಡಳಿಗಳು ಮತ್ತು ನಿಗಮಗಳ ನೇಮಕಾತಿಗಳ ಬಗ್ಗೆ ಚರ್ಚಿಸಿರುವುದು ದುರಾದೃಷ್ಟಕರ ಸಂಗತಿ. ಇದು ಅವರ ಆದ್ಯತೆಗಳನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ನಡೆದುಕೊಳ್ಳುತ್ತಿರುವ ರೀತಿ ರೈತ, ಬಡವರು, ದಲಿತರ ವಿರೋಧಿ ಎಂಬುದನ್ನು ಸೂಚಿಸುತ್ತದೆ. ಸರಕಾರ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು.
ಇದೇ ವೇಳೆ ಬರ ಪರಿಹಾರ ವಿಚಾರದಲ್ಲಿ ಕೇಂದ್ರದ ಮೇಲೆ ಆರೋಪ ಮಾಡುತ್ತಿರುವ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದರು.
ಬಳಿಕ ಹಿಂದುತ್ವದ ಮುಖಂಡ ಅರುಣಕುಮಾರ ಪುತ್ತಿಲ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ ಎಂಬ ವರದಿಗಳ ಕುರಿತು ಮಾತನಾಡಿ, ಪಕ್ಷದ ಹಿರಿಯ ನಾಯಕರ ಅಭಿಪ್ರಾಯ ಪಡೆದು ಈ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಜಾತಿ ಗಣತಿ ವಿಚಾರ ಕುರಿತು ಮಾತನಾಡಿ, ಜಾತಿ ಗಣತಿಗೆ ಬಿಜೆಪಿ ವಿರೋಧಿಸುತ್ತಿಲ್ಲ. ಆದರೆ, ಹಿಂದೆ ಅಧಿಕಾರದಲ್ಲಿದ್ದಾಗ ಏಕೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜಾತಿಗಣತಿ ವರದಿ ವಿಚಾರವನ್ನು ಪ್ರಸ್ತಾಪಿಸಲಾಗುತ್ತಿದೆ. ಇದನ್ನು ಚುನಾವಣಾ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.
ಇದೇ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ “ಮುಸ್ಲಿಂ ಸ್ಪೀಕರ್ಗೆ ನಮಸ್ಕರಿಸುವ” ಹೇಳಿಕೆಯನ್ನು ಟೀಕಿಸಿದ ಅವರು, ಅವರಿಗೆ ಇನ್ನೂ ಹೊರಗೆ ತಿರುಗಾಡಲು ಅವಕಾಶ ನೀಡಿರುವುದೇ ದೊಡ್ಡ ಅಪರಾಧವಾಗಿದೆ ಎಂದು ಹೇಳಿದರು.
ಚಳಿಗಾಲದ ಅಧಿವೇಶನದಲ್ಲಿ ಅವರು ಹೇಗೆ ಪಾಲ್ಗೊಳ್ಳುತ್ತಾರೆ ಎಂಬುದನ್ನು ನಾವು ನೋಡುತ್ತೇವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


