ಪ್ರಧಾನಿ ಮೋದಿ ಜಾತೀಯತೆ ಜೊತೆ ಪ್ರಾದೇಶಿಕತೆ ತಳುಕುಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಸಿಎಂ ಸಿದ್ದರಾಮಯ್ಯ
ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾತೀಯತೆ ಮತ್ತು ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಬೆಂಗಳೂರು: ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾತೀಯತೆ ಮತ್ತು ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿಗಳ ಕರೆಗೆ ಸಹಮತವಿದ್ದರೂ ತೊಡೆದುಹಾಕುವ ಬಗೆ ಹೇಗೆ ಎಂಬುದನ್ನು ತುಸು ವಿವರಿಸಿದ್ದರೆ ಅವರ ಉದ್ದೇಶ ಸ್ಪಷ್ಟವಾಗುತ್ತಿತ್ತು ಎಂದಿದ್ದಾರೆ.
ಪ್ರಧಾನಿ ಮೋದಿ ಜಾತೀಯತೆ ಜೊತೆ ಪ್ರಾದೇಶಿಕತೆ ತಳುಕುಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ? ಭಾರತ ಎನ್ನುವುದು ದೇಶ ಮಾತ್ರವಲ್ಲ ಅದು ರಾಜ್ಯಗಳ ಒಕ್ಕೂಟ ಎನ್ನುವುದನ್ನು ಸಂವಿಧಾನವೇ ಹೇಳಿದೆ. ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಕೂಡಾ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ವೈವಿಧ್ಯವನ್ನು ಹೊಂದಿವೆ. ಈ ಪ್ರಾದೇಶಿಕತೆಯನ್ನು ತೊಡೆದುಹಾಕುವುದೆಂದರೆ ವೈವಿಧ್ಯತೆಯನ್ನು ನಾಶಮಾಡುವುದೇ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಹಾಗೂ ಸಂಘ ಪರಿವಾರ ಆಗಾಗ ಏಕಭಾಷೆ, ಏಕ ಸಂಸ್ಕೃತಿಯ ಭಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕತೆಯನ್ನು ತೊಡೆದುಹಾಕಲು ನೀಡುವ ಕರೆ ರಾಜ್ಯಗಳ ಅಸ್ಮಿತೆಗೆ ನೀಡಿರುವ ಬೆದರಿಕೆಯ ರೀತಿ ಕಾಣುತ್ತಿದೆ. ಇದನ್ನು ಒಪ್ಪಲು ಸಾಧ್ಯ ಇಲ್ಲ. ಇಂತಹದ್ದೊಂದು ಹೇಳಿಕೆ ಸಾಕ್ಷಾತ್ ಪ್ರಧಾನಮಂತ್ರಿಯವರಿಂದಲೇ ಬಂದಿರುವುದರಿಂದ ಅವರೇ ಇದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದಿದ್ದಾರೆ. ಅಲ್ಲದೇ ಹಿಂದೂ ಧರ್ಮದ ಬಗ್ಗೆ ದಣಿವಿಲ್ಲದಂತೆ ರಾತ್ರಿ-ಹಗಲು ಮಾತನಾಡುವ ಮೋದಿ ಮತ್ತು ಅವರ ಪಕ್ಷ ಜಾತಿಯ ಪ್ರಶ್ನೆ ಎದುರಾದ ಕೂಡಲೇ ಭೀತಿಗೀಡಾಗುತ್ತಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಜಾತೀಯತೆಯನ್ನು ತೊಡೆದುಹಾಕಬೇಕಾದರೆ ಮೊದಲು ಅದಕ್ಕೆ ಅಂಟಿ ಕೊಂಡಿರುವ ಅಸ್ಪೃಶ್ಯತೆ, ಅಸಮಾನತೆ, ಲಿಂಗತಾರತಮ್ಯ ಮತ್ತು ಶೋಷಕ ವ್ಯವಸ್ಥೆಯನ್ನು ತೊಡೆದುಹಾಕಬೇಕು. ಜಾತಿ ಆಧಾರಿತ ಅಸಮಾನತೆಯನ್ನು ನಿವಾರಣೆ ಮಾಡುವ ಉದ್ದೇಶದಿಂದಲೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೆ ತಂದಿದ್ದರು. ಮೀಸಲಾತಿಯನ್ನು ಜಾತಿ ಆಧಾರದಲ್ಲಿಯೇ ನೀಡಲಾಗುತ್ತಿದೆ. ಮೋದಿ ಜಾತೀಯತೆಯನ್ನು ತೊಡೆದುಹಾಕಲು ನೀಡಿರುವ ಕರೆ ಮೀಸಲಾತಿಯನ್ನು ವಿರೋಧಿಸಲು ನೀಡಿರುವ ಪ್ರಚೋದನೆಯಂತೆ ಕಾಣುತ್ತಿದೆ. ಈ ಬಗ್ಗೆ ದೇಶದ ಜನ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


