ರಾಜಕೀಯ

ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ನೀರು ಬಿಟ್ಟಿದ್ದೇಕೆ? ನಿಯಂತ್ರಣ ಸಮಿತಿಯವರು ದೇವಲೋಕದಿಂದ ಇಳಿದು ಬಂದಿದ್ದಾರೆಯೇ? ಎಚ್.ಡಿಕೆ

ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ, ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ನೀರು ಬಿಟ್ಟಿದ್ದೇಕೆ? ನಿಯಂತ್ರಣ ಸಮಿತಿಯವರು ದೇವಲೋಕದಿಂದ ಇಳಿದು ಬಂದಿದ್ದಾರೆಯೇ? ಎಚ್.ಡಿಕೆ
ಎಚ್.ಡಿ ಕುಮಾರಸ್ವಾಮಿ
Published On :

ಚನ್ನಪಟ್ಟಣ : ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ, ನೀರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಚನ್ನಪಟ್ಟಣದಲ್ಲಿ ಬುಧವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು  ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿದ್ದು ಯಾಕೆ? ಸಂಸದರಿಗೆ ಭಾಷಣ ಮಾಡಲಿಕ್ಕಾ ಎಂದು ಪ್ರಶ್ನಿಸಿದರು.

ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಏನು ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು. ಅದಕ್ಕೆ ನಾವು ಮಾಡಿದ್ದೇವೆ? ಆ ಬಗ್ಗೆ ಸರಕಾರ ಚಿಂತನೆ ಮಾಡಬೇಕು, ಅಲ್ಲವೇ? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ನಿಯಂತ್ರಣ ಸಮಿತಿಯವರು ದೇವಲೋಕದಿಂದ ಇಳಿದು ಬಂದಿದ್ದಾರೆಯೇ? ಅವರು ನಾವು ನೇಮಕ ಮಾಡಿಕೊಂಡ ಸದಸ್ಯರೆಲ್ಲವೇ? ಈಗ ನೋಡಿದರೆ ನಮ್ಮ ರಾಜ್ಯದ ಜನರ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನಮ್ಮ ಅಧಿಕಾರಿಗಳ ಕೆಲಸವೋ ದೇವರಿಗೆ ಪ್ರೀತಿ. ದೆಹಲಿಯಲ್ಲಿ ನಡೆಯುವ ಸಭೆಗಳಿಗೆ ಮಾಹಿತಿ, ಅಂಕಿ ಅಂಶಗಳ ಸಮೇತ ಹೋಗಿ ಕೂತು ಚರ್ಚೆ ಮಾಡುವುದು ಬಿಟ್ಟು ಇಲ್ಲಿಂದಲೇ ವರ್ಚುವಲ್ ಆಗಿ ಹಾಜರಾಗುತ್ತಾರೆ. ತಮಿಳುನಾಡಿನಿಂದ ಹದಿನೈದು ಜನ ಅಧಿಕಾರಿಗಳು ಹೋಗುತ್ತಾರೆ. ಇದರಿಂದ ರಾಜ್ಯಕ್ಕೆ ನ್ಯಾಯ ಸಿಗಲು ಸಾಧ್ಯವೇ? ಎಂದು ಬೇಸರ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ಕರೆದು ಇವತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಏನು ಚರ್ಚೆ ಮಾಡಿದರು? ಇವರೇನು ಹೇಳಿದರು ಎನ್ನುವ ಮಾಹಿತಿಯೂ ನನಗೆ ಇದೆ. ಹೊರನೋಟಕ್ಕೆ ನಾವು ಒಗ್ಗಟ್ಟಾಗಿದ್ದೇವೆ ಎಂದು ಹೇಳಿಕೆ ಕೊಟ್ಟರೆ ಪ್ರಯೋಜನ ಏನಿದೆ? ಅಲ್ಲಿ ಸಂಸದರನ್ನು ಕೂರಿಸಿಕೊಂಡು ಭಾಷಣ ಮಾಡಲಿಕ್ಕೆ ಹೋಗಿದ್ದರಾ? ಎಂದು ಕಿಡಿಕಾರಿದರು.

ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತು. ಅದೆಲ್ಲಾ ಗೊತ್ತಿದ್ದರೂ ಸಭೆಯಲ್ಲಿ ಭಾಷಣ ಮಾಡಲಿಕ್ಕೆ ರಾತ್ರೋರಾತ್ರಿ ತರಾತುರಿಯಲ್ಲಿ ಇವರೆಲ್ಲ ದೆಹಲಿಗೆ ಹೋಗಬೇಕಿತ್ತಾ? ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಹಾಕಿ, ರಾಜ್ಯ ವಾಸ್ತವ ಪರಿಸ್ಥಿತಿಯನ್ನು ವಿವರಿಸುವುದು ಬಿಟ್ಟು, ಆ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವುದು ಬಿಟ್ಟು, ಅರ್ಜಿ ಸಲ್ಲಿಸುವುದಕ್ಕೆ ಆಲೋಚನೆ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.

ಇನ್ನೊಂದೆಡೆ ತಮಿಳುನಾಡಿಗೆ ನೀರು ಹರಿದು ಹೋಗುತ್ತಿದೆ. ಅಣೆಕಟ್ಟೆಯಲ್ಲಿ ನೀರೆಲ್ಲ ಖಾಲಿಯಾದ ಮೇಲೆ ಇವರು ಕ್ರಮ ಕೈಗೊಳ್ಳುತ್ತಾರೆಯೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ನೀರಾವರಿ ಬಗ್ಗೆ ಇವರಿಗೆ ತಿಳಿವಳಿಕೆ ಇಲ್ಲದಿದ್ದರೆ ಕೊನೆಪಕ್ಷ ಈ ಬಗ್ಗೆ ಗೊತ್ತಿರುವವರ ಸಲಹೆಯನ್ನಾದರೂ ಪಡೆದು ಹೆಜ್ಜೆ ಇಡಬೇಕಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.