ಗುತ್ತಿಗೆದಾರ ಆತ್ಮಹತ್ಯೆ: ಸಾಕ್ಷಿಯೇ ಇಲ್ಲದೆ ಪ್ರಿಯಾಂಕ್ ಖರ್ಗೆಯನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ: ಜಿ ಪರಮೇಶ್ವರ
ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ.

ಬೆಂಗಳೂರು: ಕಳೆದ ವಾರ ಬೀದರ್ನಲ್ಲಿ ನಡೆದ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜೀನಾಮೆಗೆ ಒತ್ತಾಯಿಸುತ್ತಿರುವ ತಮ್ಮ ಸಂಪುಟ ಸಹೋದ್ಯೋಗಿ ಪ್ರಿಯಾಂಕ್ ಖರ್ಗೆ ಅವರನ್ನು ಗೃಹ ಸಚಿವ ಜಿ ಪರಮೇಶ್ವರ ಸಮರ್ಥಿಸಿಕೊಂಡಿದ್ದು, ಸಿಐಡಿ ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ಗುತ್ತಿಗೆದಾರರು ಪ್ರಿಯಾಂಕ್ ಖರ್ಗೆ ಅವರ ಆಪ್ತರೊಬ್ಬರ ವಿರುದ್ಧ ಆರೋಪ ಮಾಡಿರುವ ಏಳು ಪುಟಗಳ ಡೆತ್ ನೋಟ್ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿರುವ ಬಿಜೆಪಿ, ಜನವರಿ 4ರೊಳಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಇಲ್ಲವಾದರೆ, ಕಲಬುರಗಿಯಲ್ಲಿ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.
'ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ, ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಡೆತ್ನೋಟ್ನಲ್ಲಿ ತಮ್ಮ ಹೆಸರಿಲ್ಲ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿಯವರು ಅವರನ್ನು ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಯಾವುದೇ ಸಾಕ್ಷ್ಯವಿಲ್ಲದೆ ಅನಗತ್ಯವಾಗಿ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ' ಎಂದು ಪರಮೇಶ್ವರ ಅವರು ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಈ ಮಟ್ಟಕ್ಕೆ ಇಳಿಯಬಾರದು. ಈ ಹಿಂದೆ ತಾವೂ ಸಹ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದೇವೆ. ಸರ್ಕಾರ ನಡೆಸುವಾಗ ನಾವೆಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತೇವೆ. ಪ್ರಿಯಾಂಕ್ ಖರ್ಗೆ ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಯಾವುದೇ ಪೂರಕ ಸಾಕ್ಷ್ಯಗಳಿದ್ದರೆ ನಾವು ಸ್ವೀಕರಿಸುತ್ತೇವೆ ಎಂದು ಅವರು ಹೇಳಿದರು.
ಆರೋಪಿ ರಾಜು ಕಪನೂರನನ್ನು ಪೊಲೀಸರು ಇನ್ನೂ ಬಂಧಿಸದಿರುವ ಕುರಿತು ಕೇಳಿದ ಪ್ರಶ್ನೆಗೆ, ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಅನಾವಶ್ಯಕವಾಗಿ ಆರೋಪ ಮಾಡುವುದು ಸರಿಯಲ್ಲ, ಸಿಐಡಿ ತನಿಖೆಯಾಗಲಿ, ಸತ್ಯಾಂಶ ಹೊರಬೀಳಲಿದೆ. ಹಣಕಾಸು ವ್ಯವಹಾರ ನಡೆದಿದೆಯೇ ಅಥವಾ ಇತರೆ ವಿಷಯಗಳು ವಿಚಾರಣೆಯಿಂದ ಗೊತ್ತಾಗಲಿದೆ ಎಂದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯ ಒಳಗೆ ಮತ್ತು ಹೊರಗೆ ಹಲವಾರು ಸಂದರ್ಭಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ತಪ್ಪುಗಳನ್ನು ಸಾರ್ವಜನಿಕವಾಗಿ ಎತ್ತಿ ತೋರಿಸಿದ್ದಾರೆ. ಅದು ಅವರಿಗೆ ಇಷ್ಟವಾಗುವುದಿಲ್ಲ. ಹೀಗಾಗಿ, ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ ಹಾಗೂ ಇತರ ಆರೋಪಿಗಳಿಗೆ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನಿಸಲಾಗಿದೆ. ನಿನ್ನೆ ಆದೇಶ ಹೊರಡಿಸಲಾಗಿದೆ' ಎಂದರು.

ರಾಜ್ಯ ನಿರ್ನಾಮ ಮಾಡಲು ಹವಣಿಸುತ್ತಿರುವ ತ್ರಿವಳಿಗಳು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ತೀವ್ರ; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


