ಲೋಕ ಸಮರ: ಮಂಡ್ಯ ಕ್ಷೇತ್ರದಿಂದ ಸುಮಲತಾ ಶಿಫ್ಟ್? ಬೆಂಗಳೂರು ಗ್ರಾಮಾಂತರಕ್ಕೆ ನಾನೇ ಫಿಟ್- ಸಿ.ಪಿ ಯೋಗೇಶ್ವರ್ !
ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಯುತ್ತಿರುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಯುತ್ತಿರುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿದ್ದಾರೆ.
ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಮಂಡ್ಯ ಲೋಕಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನದ ಅಲೆಯನ್ನು ಎಬ್ಬಿಸಿದೆ. ಮಂಡ್ಯ ತಮ್ಮ ಪಕ್ಷಕ್ಕೆ ಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ , ಹೀಗಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೇರೆಡೆ ಅವಕಾಶ ಕಲ್ಪಿಸಬೇಕಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಸ್ಥಾನ ನೀಡುವ ಮೂಲಕ ಅವರನ್ನು ಸಮಾಧಾನಪಡಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ.
ಬಿಜೆಪಿ ಸಮೀಕರಣದಿಂದ ಎಚ್ಚೆತ್ತ ಬಿಜೆಪಿ ಎಂಎಲ್ ಸಿ ಸಿಪಿ ಯೋಗೇಶ್ವರ್ ತರಾತುರಿಯಲ್ಲಿ ಭಾನುವಾರ ರಾತ್ರಿ ದೇವೇಗೌಡರ ಮನೆ ಕದ ತಟ್ಟಿದ್ದಾರೆ. ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿದ ಯೋಗೇಶ್ವರ್ ಸುಮಾರು 2 ಗಂಟೆಗಳ ಕಾಲ ದೇವೇಗೌಡರ ಜೊತೆ ಚರ್ಚಿಸಿದ್ದಾರೆ. ಈ ಹಿಂದಿನ ಚುನಾವಣೆಗಳ ಅಂಕಿಅಂಶಗಳನ್ನು ವಿವರಿಸಿದ್ದಾಕೆ. 2009ರ ಲೋಕಸಭೆ ಚುನಾವಣೆಯಲ್ಲಿ ಯೋಗೇಶ್ವರ್ 3.6 ಲಕ್ಷ ಮತ ಗಳಿಸಿದ್ದರೆ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ 4.9 ಲಕ್ಷ ಮತ ಗಳಿಸಿದ್ದರು. ಹೀಗಾಗಿ ಬೆಂಗಳೂರು ಗ್ರಾಮಾಂತರಕ್ಕೆ ಬಿಜೆಪಿ-ಜೆಡಿಎಸ್ ನಿಂದ ನಾನೇ ಅಭ್ಯರ್ಥಿಯಾಗುವುದು ಸೂಕ್ತಎಂದು ಗೌಡರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು, ಏಕೆಂದರೆ ತಾವು ಎರಡೂ ಪಕ್ಷಗಳ ಮತಗಳನ್ನು ಕಸಿದುಕೊಳ್ಳಬಹುದು ಎಂದು ವಿವರಿಸಿದ್ದಾರೆ.
ಇದನ್ನೂ ಓದಿ: ಹೆಚ್.ಡಿ ದೇವೇಗೌಡ ಭೇಟಿ ಮಾಡಿದ ಸಿಪಿ ಯೋಗೇಶ್ವರ್
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರೊಂದಿಗೆ ಈ ಹಿಂದೆ ಮಾತುಕತೆ ನಡೆಸಿದ್ದರು. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಳೆ ಮೈಸೂರು ಭಾಗದ ಅನೇಕ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಯೋಗೇಶ್ವರ್ ಕೂಡ ಸೇರಿದ್ದಾರೆ. ಈಗಾಗಲೇ ಹಲವು ಬಿಜೆಪಿ ಮುಖಂಡರು ಗೌಡರನ್ನು ಭೇಟಿ ಮಾಡಿದ್ದಾರೆ ಏಕೆಂದರೆ ಅವರು ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲೂ ದೇವೇಗೌಡರ ಪ್ರಮುಖ ಪಾತ್ರವಹಿಸುತ್ತಿದ್ದಾರೆ.
ನಗರ ಮತ್ತು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಮಿಶ್ರಣವನ್ನು ಹೊಂದಿರುವ ಬೆಂಗಳೂರು ಗ್ರಾಮಾಂತರದಿಂದ ಸುಮಲತಾ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸುಮಲತಾ ಅವರು ಮಂಡ್ಯಕ್ಕಾಗಿ ಪ್ರಬಲ ಲಾಬಿ ನಡೆಸಿದ್ದರು, ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದರು.
ಬೆಂಗಳೂರು ಉತ್ತರ ಕ್ಷೇತ್ರವನ್ನು ಸುಮಲತಾ ಅವರಿಗೆ ನೀಡಲಾಗುತ್ತಿಲ್ಲ, ಹಾಲಿ ಸಂಸದ ಡಿವಿ ಸದಾನಂದ ಗೌಡರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ಸಾಧ್ಯತೆಯಿರುವುದರಿಂದ ಆ ಕ್ಷೇತ್ರಕ್ಕೆಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸುಮಲತಾ ಅವರಿಗೆ ಉತ್ತಮ ಆಯ್ಕೆಯಾಗಿದ್ದು, ಹಾಲಿ ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿದರೆ ದಕ್ಷಿಣದ ರಾಜ್ಯಗಳಿಗೆ ಪ್ರತ್ಯೇಕ ರಾಷ್ಟ್ರ ಹುಡುಕುವ ಪರಿಸ್ಥಿತಿ ಎದುರಾಗಬಹುದು ಎಂದು ಸುರೇಶ್ ಕಿಡಿ ಕಾರಿದ್ದರು. ಹೀಗಾಗಿ ಬಿಜೆಪಿ ಹೈಕಮಾಂಡ್ ಸುರೇಶ್ ಅವರನ್ನು ಸೋಲಿಸುವ ಅಭ್ಯರ್ಥಿಯ ಹುಡುಕಾಟದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


