ರಾಜಕೀಯ

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್: ಹೈಕಮಾಂಡ್ ನಾಯಕರಲ್ಲೂ ಗೊಂದಲ, ಭಿನ್ನಾಭಿಪ್ರಾಯ?

ಎರಡು ಸಭೆಗಳಲ್ಲಿ ಏನು ಚರ್ಚಿಸಲಾಗಿದೆ ಎಂಬುದು ಬಹಿರಂಗವಾಗದಿದ್ದರೂ, ಮಾತುಕತೆಯ ಭಾಗವಾಗಿರುವ ಉನ್ನತ ಹುದ್ದೆಗಳಲ್ಲಿನ ಬದಲಾವಣೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಉನ್ನತ ಮೂಲಗಳು ಹೇಳುತ್ತವೆ.

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್: ಹೈಕಮಾಂಡ್ ನಾಯಕರಲ್ಲೂ ಗೊಂದಲ, ಭಿನ್ನಾಭಿಪ್ರಾಯ?
ಸಿದ್ದರಾಮಯ್ಯ , ಡಿ ಕೆ ಶಿವಕುಮಾರ್
Published On :

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಇನ್ನಷ್ಟು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ವಿಚಾರ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಹೊಂದಿದ್ದಾರೆ.

ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮೊನ್ನೆ ಶನಿವಾರ ಸಂಜೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಗೌಪ್ಯ ಸಭೆ ನಡೆಸಿದ್ದು, ನಂತರ ಮರುದಿನ ನಿನ್ನೆ ಭಾನುವಾರ ಬೆಳಗ್ಗೆ ಡಿ ಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಎರಡು ಸಭೆಗಳಲ್ಲಿ ಏನು ಚರ್ಚಿಸಲಾಗಿದೆ ಎಂಬುದು ಬಹಿರಂಗವಾಗದಿದ್ದರೂ, ಮಾತುಕತೆಯ ಭಾಗವಾಗಿರುವ ಉನ್ನತ ಹುದ್ದೆಗಳಲ್ಲಿನ ಬದಲಾವಣೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಉನ್ನತ ಮೂಲಗಳು ಹೇಳುತ್ತವೆ.

ಡಾ. ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್ ಮತ್ತು ನಾನು ಸೇರಿದಂತೆ ಐದರಿಂದ ಆರು ಮಂದಿ ನಾಯಕರು ಸಿದ್ದರಾಮಯ್ಯ ಅವರೊಂದಿಗೆ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದೇವೆ. ನಾವೆಲ್ಲ ಹೊರಬಂದ ನಂತರ ಸಿದ್ದರಾಮಯ್ಯನವರು ಹತ್ತು ನಿಮಿಷ ರಾಹುಲ್ ಗಾಂಧಿ ಜೊತೆ ವೈಯಕ್ತಿಕ ಮಾತುಕತೆ ನಡೆಸಿದರು. ಅವರು ಏನು ಮಾತನಾಡಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ನಿನ್ನೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಎರಡು ಪ್ರಮುಖ ಖಾತೆಗಳನ್ನು ಹೊಂದಿರುವುದರಿಂದ ಕೆಪಿಸಿಸಿ ಮುಖ್ಯಸ್ಥರ ಜವಾಬ್ದಾರಿಯನ್ನು ನಿರ್ವಹಿಸಲು ಸಮಯ ಸಾಕಾಗುತ್ತಿಲ್ಲ ಎನಿಸುತ್ತಿದೆ. ಪಕ್ಷದೊಂದಿಗೆ ಗಟ್ಟಿಯಾಗಿ ನಿಂತಿರುವ ಸಮುದಾಯದ ನಾಯಕರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಚಿಂತನೆ ನಡೆಸಲಿದೆ ಎಂದರು.

ಬಿಬಿಎಂಪಿ ಮತ್ತು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯುವವರೆಗೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಅಧ್ಯಕ್ಷ ಖರ್ಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯನವರು ಸೇರಿರುವ ಕುರುಬ ಸಮುದಾಯವು ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಬೆಂಬಲ ನೀಡಿಲ್ಲ ಎಂದು ಖರ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಕ್ಕಲಿಗರು ಮತ್ತು ಲಿಂಗಾಯತರು ಒಗ್ಗಟ್ಟಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ನೀಡುತ್ತಿರುವುದರಿಂದ ಈಗ ಒಕ್ಕಲಿಗ ಸಮುದಾಯದ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದು ಬುದ್ಧಿವಂತಿಕೆಯ ಕ್ರಮವಲ್ಲ ಎಂದು ಎಐಸಿಸಿ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ ಅಹಿಂದ ಸಮುದಾಯಗಳಾದ ಮುಸ್ಲಿಮರು ಮತ್ತು ಎಸ್‌ಸಿ/ಎಸ್‌ಟಿ/ಒಬಿಸಿಗಳಿಗೆ ತಮ್ಮ ನಾಯಕರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ನೇಮಿಸುವ ಮೂಲಕ ಪ್ರಾತಿನಿಧ್ಯ ನೀಡಬೇಕು ಎಂಬ ಸಿದ್ದರಾಮಯ್ಯ ಪಾಳಯದ ಸಿದ್ಧಾಂತಕ್ಕೆ ರಾಹುಲ್‌ ಗಾಂಧಿಯವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಭಿಪ್ರಾಯ ಕೇಳಬಹುದು ಎನ್ನಲಾಗುತ್ತಿದೆ.

ಪರಿಶಿಷ್ಟ ಪಂಗಡದ ಮುಖಂಡ, ಸಿದ್ದರಾಮಯ್ಯ ನಿಷ್ಠಾವಂತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಚಿವ ಸ್ಥಾನವನ್ನು ತ್ಯಾಗ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲು ಸಿದ್ಧ ಎಂದು ಬಹಿರಂಗವಾಗಿ ಹೇಳಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆಯವರು ಉತ್ತರ ಕರ್ನಾಟಕದ ವೀರಶೈವ-ಲಿಂಗಾಯತ ನಾಯಕರಿಗೆ ಪ್ರಾಮುಖ್ಯತೆ ನೀಡಬಹುದು ಎನ್ನಲಾಗುತ್ತಿದೆ. ಹಾಗಾದಲ್ಲಿ ಸಚಿವರಾದ ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಅವರನ್ನು ಪರಿಗಣಿಸಬಹುದು.

ಆದರೆ ಅವರು ತಮ್ಮ ಸಚಿವ ಸ್ಥಾನವನ್ನು ತ್ಯಾಗ ಮಾಡುತ್ತಾರೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರೆ, ಕಾಂಗ್ರೆಸ್ ಪಕ್ಷವು ಪಂಚಮಸಾಲಿ-ಲಿಂಗಾಯತರಂತಹ ಉಪ ಪಂಗಡದ ನಾಯಕನನ್ನು ಆ ಸ್ಥಾನಕ್ಕೆ ಆಯ್ಕೆ ಮಾಡಬಹುದು ಎಂದು ಮತ್ತೊಬ್ಬ ನಾಯಕರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.