ರಾಜಕೀಯ

ಮುಡಾ, ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ GTD ಆಗ್ರಹ

ಮುಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ವ್ಯವಹಾರ ನಡೆದಿದ್ದು, ಹಗರಣದಲ್ಲಿ ಸಿದ್ದರಾಮಯ್ಯ ಅವರ ಹೆಸರು ತಳುಕು ಹಾಕಿಕೊಂಡಿರುವುದರಿಂದ ರಾಜೀನಾಮೆ ನೀಡಬೇಕು.

ಮುಡಾ, ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ GTD ಆಗ್ರಹ
ಜಿಟಿ ದೇವೇಗೌಡ
Published On :

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಡಾ ಸದಸ್ಯರೂ ಆಗಿರುವ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಗುರುವಾರ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಿಎಂಗಳಾದ ರಾಮಕೃಷ್ಣ ಹೆಗಡೆ ಮತ್ತು ಎಸ್ ಬಂಗಾರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಒಂದು ಕಾಲದಲ್ಲಿ ಸಮಾಜವಾದಿ ಸಿದ್ಧಾಂತಕ್ಕೆ ಬದ್ಧರಾಗಿದ್ದ ಸಿದ್ದರಾಮಯ್ಯ ಅವರು ಇದೀಗ ಅಕ್ರಮಗಳ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮುಡಾದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ವ್ಯವಹಾರ ನಡೆದಿದ್ದು, ಹಗರಣದಲ್ಲಿ ಸಿದ್ದರಾಮಯ್ಯ ಅವರ ಹೆಸರು ತಳುಕು ಹಾಕಿಕೊಂಡಿರುವುದರಿಂದ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಮುಡಾ ನಿವೇಶನಗಳಿಂದ ತಮಗೂ ಲಾಭವಾಗಿದೆ ಎಂಬ ಆರೋಪವನ್ನು ನಿರಾಕರಿಸಿದ ಅವರು, ನಾನು ಅಥವಾ ನನ್ನ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಮುಡಾ ನಿವೇಶನ ಇಲ್ಲ, ನಮ್ಮ ಹೆಸರಿನಲ್ಲಿ ಹೋಟೆಲ್‌ಗಳು ಅಥವಾ ರೆಸಾರ್ಟ್‌ಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಡಾದಿಂದ ನಾನು 100 ಸೈಟ್‌ಗಳನ್ನು ಪಡೆದಿದ್ದೇನೆ ಎಂದು ಆರೋಪ ಮಾಡಲಾಗುತ್ತಿದೆ. ನೂರು ಬೇಡ ಕೇವಲ ಒಂದು ಸೈಟ್‌ ಇರುವುದನ್ನು ಸಾಭೀತು ಮಾಡಿದರೆ ಅದನ್ನು ಅಲ್ಲೇ ಬರೆದು ಕೊಡುತ್ತೇನೆ. ಇಷ್ಟು ವರ್ಷದ ನನ್ನ ಸುದೀರ್ಘ ರಾಜಾಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕಿ ಇಲ್ಲದೆ ಬಂದಿದ್ದೇನೆ. ಸ್ವಾಭಿಮಾನ, ಪ್ರಾಮಾಣಿಕವಾಗಿ ಬೆಳದು ಒಂದು ಮಾದಿರಿ ವ್ಯಕ್ತಿಯಾಗಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಡಾದಲ್ಲಿ ಹಲವಾರು ಅಕ್ರಮಗಳು ನಡೆದಿವೆ. ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಜುಲೈ 15ರಿಂದ ಆರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡುವವರಿಗೆ ಎಫ್‌ಐಆರ್ ದಾಖಲಿಸಿ ಲೀಗಲ್ ನೋಟಿಸ್ ಕಳುಹಿಸುವುದಾಗಿಯೂ ಎಚ್ಚರಿಕೆ ನೀಡಿದರು.

ನಗರಾಭಿವೃದ್ಧಿ ಅಧಿಕಾರಿಗಳು 50:50 ಅನುಪಾತ ಯೋಜನೆಯಡಿ ನಿವೇಶನ ಹಂಚಿಕೆ ಮಾಡುವುದನ್ನು 2015ರಿಂದ ನಡೆಸಿಕೊಂಡು ಬಂದಿದ್ದಾರೆ. ಆದರೆ, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ಮೂಲಕ ಅಕ್ರಮ ಎಸಗಿದ್ದಾರೆ,

ಮುಡಾದಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುತ್ತಿರುವ ಐಎಎಸ್ ಅಧಿಕಾರಿಗಳ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿದ್ದು, ವರದಿ ಬಂದ ನಂತರವಷ್ಟೇ 50:50 ಯೋಜನೆಯಲ್ಲಿ ಎಷ್ಟು ಅಕ್ರಮ ನಡೆದಿದೆ, ಯಾರಿಗೆ ಲಾಭವಾಗಿದೆ, ಯಾವ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬುದು ಬಹಿರಂಗವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.