ಬಿಜೆಪಿ ಸರ್ಕಾರದಲ್ಲಿ ಹಗರಣ ನಡೆದಿದ್ದರೆ ತನಿಖೆ ಮಾಡಿ: ಸಿಎಂ ಸಿದ್ದರಾಮಯ್ಯಗೆ ಆರ್ ಅಶೋಕ್ ಸವಾಲು
ವಾಲ್ಮೀಕಿ ಅಭಿವೃದ್ಧಿ ನಿಗಮದ 88 ಕೋಟಿ ರೂಪಾಯಿಗಳನ್ನು ತೆಲಂಗಾಣದ ವಿವಿಧ ಬ್ಯಾಂಕ್ ಖಾತೆಗಳಿಗೆ ವೇಗವಾಗಿ ವರ್ಗಾಯಿಸಿದ ರೀತಿ, ನಮ್ಮ ವಿರುದ್ಧದ ಅಕ್ರಮಗಳ ಆರೋಪದ ಬಗ್ಗೆ ಕೂಡ ಕ್ಷಿಪ್ರವಾಗಿ ತನಿಖೆ ಮಾಡಬೇಕು ಎಂದರು.

ಬೆಂಗಳೂರು: ಕೇಸರಿ ಪಕ್ಷ ಬಿಜೆಪಿ ಕಳೆದ ಸಲ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ 21 ಹಗರಣಗಳ ಕುರಿತು ತನಿಖೆಗೆ ಆದೇಶಿಸುವಂತೆ ಕೇಸರಿ ಪಡೆ ನಾಯಕರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂಪಾಯಿಗಳ ಹಗರಣದಲ್ಲಿ ಭಾಗಿಯಾದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಕ್ಷಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಬಿಜೆಪಿ ಆಡಳಿತ ಸಮಯದಲ್ಲಿ 21 ಹಗರಣಗಳು ರಾಜ್ಯದಲ್ಲಿ ನಡೆದಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕಳೆದ 15 ತಿಂಗಳಿನಿಂದ ನೀವು ಅಧಿಕಾರದಲ್ಲಿದ್ದೀರಿ. ಈ ಹಗರಣಗಳ ತನಿಖೆಗೆ ನೀವು ಏಕೆ ಇಷ್ಟು ಸಮಯ ತೆಗೆದುಕೊಂಡಿದ್ದೀರಿ? ನಾವು ತನಿಖೆಗೆ ಸಿದ್ಧರಿದ್ದೇವೆ ಎಂದು ವಿಧಾನ ಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ 88 ಕೋಟಿ ರೂಪಾಯಿಗಳನ್ನು ತೆಲಂಗಾಣದ ವಿವಿಧ ಬ್ಯಾಂಕ್ ಖಾತೆಗಳಿಗೆ ತ್ವರಿತವಾಗಿ ವರ್ಗಾಯಿಸಿದ ರೀತಿ, ನಮ್ಮ ವಿರುದ್ಧದ ಅಕ್ರಮಗಳ ಆರೋಪದ ಬಗ್ಗೆ ಕೂಡ ಕ್ಷಿಪ್ರವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಬುಡಕಟ್ಟು ಕಲ್ಯಾಣ ಸಚಿವ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ರಕ್ಷಿಸಲು ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ಬಹಳ ಅಲ್ಪ ಮೊತ್ತ ತೆಗೆದುಕೊಂಡಿದ್ದಾರೆ. ಈ ಹಗರಣದಲ್ಲಿ ದೊಡ್ಡ ಮೊತ್ತವು ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ನಾಯಕರಿಗೆ ಹೋಗಿದೆ ಎಂದು ಆರೋಪಿಸಿದರು.
ಪ್ರಕರಣ ಬೆಳಕಿಗೆ ಬಂದದ್ದು ಹೇಗೆ?: ಮೇ 26 ರಂದು ಪಾಲಿಕೆಯ ಲೆಕ್ಕ ಅಧೀಕ್ಷಕ ಚಂದ್ರಶೇಖರನ್ ಪಿ ಆತ್ಮಹತ್ಯೆ ಮಾಡಿಕೊಂಡ ನಂತರ ಆರೋಪದ ವಂಚನೆ ಬೆಳಕಿಗೆ ಬಂದಿದೆ. ಪಾಲಿಕೆಗೆ ಸೇರಿದ 187 ಕೋಟಿ ರೂಪಾಯಿಯನ್ನು ವಿವಿಧ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಚಂದ್ರಶೇಖರನ್ ಆತ್ಮಹತ್ಯೆ ಪತ್ರದಲ್ಲಿ ಆರೋಪಿಸಿದ್ದರು.
ನಂತರ ಕಾಂಗ್ರೆಸ್ ಸರ್ಕಾರ, ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದು, ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ದೂರು ನೀಡಿದ ನಂತರ ಸಿಬಿಐ ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.
ಹಗರಣ ಬೆಳಕಿಗೆ ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



