ರಾಜಕೀಯ

ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ
ಡಿಕೆ ಶಿವಕುಮಾರ್
Published On :

ಕಲಬುರಗಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಏಕೆಂದರೆ, ಅವರ ಸಂಸದರು ಯಾವುದೇ ಕೆಲಸ ಮಾಡಿಲ್ಲ ಎಂದರು.

ಬೆಂಗಳೂರಿನ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, 'ನಮ್ಮ ಸರ್ಕಾರ ಕುಡಿಯುವ ನೀರು ಒದಗಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 7,000ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿ ಹೋಗಿವೆ. ನೀರಿನ ಕೊರತೆ ಉಂಟಾಗಿದೆ. ನಾವು ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಂಡಿದ್ದೇವೆ ಮತ್ತು ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ' ಎಂದು ಹೇಳಿದರು.

ನೀರಿನ ಕೊರತೆ ನೀಗಿಸಲು ಮಹಾರಾಷ್ಟ್ರದಿಂದ ಭೀಮಾ ನದಿ ನೀರು ಬಿಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ನಮ್ಮ ಸರ್ಕಾರ ಈಗಾಗಲೇ ಪತ್ರ ಬರೆದಿದೆ. ತೆಲಂಗಾಣ ರಾಜ್ಯ ಕೂಡ ನೀರು ಕೇಳಿದೆ. ಆದರೆ, ಇಲ್ಲಿ ನೀರು ಕಡಿಮೆಯಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ' ಎಂದು ತಿಳಿಸಿದರು.

ಖಾತರಿ ಯೋಜನೆಗಳು ಜನರ ಜೀವನೋಪಾಯಕ್ಕಾಗಿಯೇ ಹೊರತು ಚುನಾವಣೆಗಾಗಿ ಅಲ್ಲ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದಕ್ಕಿಂತ ದೊಡ್ಡ ತೃಪ್ತಿ ಪಕ್ಷ ಅಥವಾ ಸರ್ಕಾರಕ್ಕೆ ಮತ್ತೊಂದಿಲ್ಲ. ಈ ಯೋಜನೆಗಳು ಜನರಿಗಾಗಿಯೇ ಹೊರತು ಯಾವುದೇ ಚುನಾವಣೆಯನ್ನು ಉದ್ದೇಶಿಸಿಲ್ಲ. ಈ ಯೋಜನೆಗಳು ಬೆಲೆ ಏರಿಕೆ ಮತ್ತು ಹಣದುಬ್ಬರದ ಹೊರೆಯನ್ನು ತಗ್ಗಿಸಲು ಉದ್ದೇಶಿಸಲಾಗಿದೆ ಎಂದು ಸಮರ್ಥಿಸಿಕೊಂಡರು.

'ದೇಶದ ಜನರು ನಮ್ಮ ಖಾತರಿ ಯೋಜನೆಗಳನ್ನು ಇಷ್ಟಪಟ್ಟಿದ್ದಾರೆ. ಈ ಯೋಜನೆಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ನಾವು ವಿವಿಧ ಹಂತಗಳಲ್ಲಿ ಖಾತರಿ ಅನುಷ್ಠಾನ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರವು ಒಟ್ಟು 3.74 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಗಾತ್ರದಲ್ಲಿ 1.26 ಲಕ್ಷ ಕೋಟಿ ರೂ. ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.