ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ
ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು: ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ. ಈ ಪರಿಹಾರದ ಹಣವನ್ನು ಹಳೇ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮ ವಹಿಸದೆ ಕೈಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕೂಡಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಟೀಕಿಸಿದರು.
ಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆ ಉಳಿಸಬೇಕು” ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



