ಅಂಬೇಡ್ಕರ್ ಅವರ ಮೀಸಲಾತಿ ನೀತಿಗಳನ್ನು ಕಾಂಗ್ರೆಸ್ ವಿರೋಧಿಸಿತ್ತು: ಬೊಮ್ಮಾಯಿ
ಅಂಬೇಡ್ಕರ್ ಅವರು ಸಂಸತ್ತಿನಲ್ಲಿ ಎಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ ಮತ್ತು ಮೀಸಲಾತಿ ಅಜೆಂಡಾವನ್ನು ಮುಂದಕ್ಕೆ ತರುತ್ತಾರೆಂಬ ಭಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಅಂಬೇಡ್ಕರ್ ವಿರುದ್ಧ ಎಸ್.ಜೆ.ಪಾಟೀಲ್ ಅವರನ್ನು ಕಣಕ್ಕಿಳಿಸಿತ್ತು.

ಶಿಗ್ಗಾಂವಿ: ಸಂಸತ್ತಿನಲ್ಲಿ ಮೀಸಲಾತಿ ಜಾರಿಗೆ ತರುವ ಸರ್ಕಾರ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಅವರ ಹೆಸರೆತ್ತುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.
ಶಿಗ್ಗಾಂವಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಮೀಸಲಾತಿ ವಿಚಾರ ಪ್ರಸ್ತಾಪಿಸಿದಾಗ ಅಂದಿನ ಕಾಂಗ್ರೆಸ್ ಪಕ್ಷದ ನಾಯಕರು ತಿರಸ್ಕರಿಸಿದ್ದರು. ಬಳಿಕ ಮಹಾತ್ಮ ಗಾಂಧಿಯವರೊಂದಿಗಿನ ಮಾತುಕತೆ ನಡೆಸಿ, ಪುಣೆ ಒಪ್ಪಂದಕ್ಕೆ ಸಹಿ ಹಾಕಿದ ನಂತರವೇ ಅಂತಿಮವಾಗಿ ಮೀಸಲಾತಿಯನ್ನು ಜಾರಿಗೆ ತರಲಾಯಿತು. ಈ ದೇಶದಲ್ಲಿ ತುಳಿತಕ್ಕೊಳಗಾದ ಸಮುದಾಯಗಳಿಗೆ ಸಮಾನತೆ ಮತ್ತು ನ್ಯಾಯ ಸಿಗದಿದ್ದರೆ ಸ್ವಾತಂತ್ರ್ಯ ತಂದಿದ್ದರ ಉದ್ದೇಶವೇನಿದೆ? ಎಂದು ಪ್ರಶ್ನಿಸಿದರು.
ಮೀಸಲಾತಿ ನೀತಿಗಳನ್ನು ಜಾರಿಗೆ ತಂದ ನಂತರವೂ ಅವುಗಳನ್ನು ಸರಿಯಾದ ರೀತಿಯಲ್ಲಿ ಕಾರ್ಯಗತಗೊಳಿಸಲಿಲ್ಲ. ಅಂಬೇಡ್ಕರ್ ಅವರು ಸಂಸತ್ತಿನಲ್ಲಿ ಎಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ ಮತ್ತು ಮೀಸಲಾತಿ ಅಜೆಂಡಾವನ್ನು ಮುಂದಕ್ಕೆ ತರುತ್ತಾರೆಂಬ ಭಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಅಂಬೇಡ್ಕರ್ ವಿರುದ್ಧ ಎಸ್.ಜೆ.ಪಾಟೀಲ್ ಅವರನ್ನು ಕಣಕ್ಕಿಳಿಸಿತ್ತು. ಅಂಬೇಡ್ಕರ್ ಅವರ ಮರಣದ ನಂತರವೂ ಅವರಿಗೆ ಅವಮಾನ ಮಾಡಿತ್ತು. ಅವರ ಅಂತ್ಯಕ್ರಿಯೆಗೆ ದೆಹಲಿಯಲ್ಲಿ ಸ್ಥಳವನ್ನು ಕೂಡ ನೀಡಲಿಲ್ಲ. ಇದೀಗ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಾರೆಂದು ಬೊಮ್ಮಾಯಿ ಟೀಕಿಸಿದರು.
ಇದೇ ವೇಳೆ ಮೀಸಲಾತಿ ವಿಚಾರ ಕುರಿತು ಅಮೆರಿಕಾದಲ್ಲಿ ಮಾತನಾಡಿದ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಅವರು, ಇದು ಅವರ ದಲಿತ ವಿರೋಧ ನಿಲುವನ್ನು ತೋರಿಸುತ್ತದೆ ಎಂದರು.
ನನ್ನ ಕ್ಷೇತ್ರದಲ್ಲಿ ಡಾ.ಜಿ.ಪರಮೇಶ್ವರ ಅಥವಾ ಎಚ್‌ಸಿ ಮಹದೇವಪ್ಪ ಅವರಿಗಿಂತ ಹೆಚ್ಚು ಅಂಬೇಡ್ಕರ್ ಭವನಗಳನ್ನು, ಪ್ರತಿಮೆಗಳನ್ನು ನಾನು ಸ್ಥಾಪಿಸಿದ್ದೇನೆ. ಅಂಬೇಡ್ಕರ್ ಅವರ ಮೇಲಿನ ಗೌರವದಿಂದ ನಾನು ಈ ಕೆಲಸ ಮಾಡಿದ್ದೇನೆ. ಆದರೆ, ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ನಿಗಮ ಅಭಿವೃದ್ಧಿಗೆ ಮೀಸಲಿಟ್ಟ ಸುಮಾರು 190 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿದೆ, ಸರ್ಕಾರ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅಭಿವೃದ್ಧಿ ನಿಗಮಗಳಿಗೆ ಯಾವುದೇ ಹಣವನ್ನು ಮಂಜೂರು ಮಾಡಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



