ಜಾತಿ ಗಣತಿ ವರದಿ ಜಾರಿ ಕುರಿತು ಅಕ್ಟೋಬರ್ 18 ರಂದು ಸಚಿವ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು: ಜಾತಿ ಗಣತಿ ಎಂದು ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಜಾರಿಗೊಳಿಸುವ ಬಗ್ಗೆ ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ ಎಂದರು.
ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಇದು ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಮಾತ್ರ ಅಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಇದು 7 ಕೋಟಿ ಕನ್ನಡಿಗರ ಸಮೀಕ್ಷೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
2013–18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ.
ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಎಚ್ಡಿ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.
ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ.
ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕಳೆದ ಫೆ. 29ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ್ದರು.
ಸಮಾಜದ ಕೆಲವು ವರ್ಗಗಳು ಮತ್ತು ಆಡಳಿತಾರೂಢ ಕಾಂಗ್ರೆಸ್‌ನ ಆಕ್ಷೇಪಗಳ ನಡುವೆ ವರದಿಯನ್ನು ಸಲ್ಲಿಸಲಾಗಿತ್ತು. ಆದರೆ ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ಈ ಸಮೀಕ್ಷೆಯನ್ನು "ಅವೈಜ್ಞಾನಿಕ" ಎಂದು ಕರೆದಿದ್ದು, ಇದನ್ನು ತಿರಸ್ಕರಿಸಬೇಕು ಮತ್ತು ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




