ಸೋನಿಯಾ-ರಾಹುಲ್ ವಿರುದ್ಧ ED ಚಾರ್ಜ್‌ಶೀಟ್: ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಮಂತ್ರಿ ನರೇಂದ್ರ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಹೇಳಿದ್ದಾರೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



