ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್
ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು?

ಬೆಂಗಳೂರು: ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿ ವಿವಾದಕ್ಕೀಡಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕ್ಷಮೆ ಕೇಳಬಾರದಿತ್ತು. ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, "ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಪ್ರಶ್ನಿಸಿದ್ದಾರೆ.
ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. "ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು. ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದಿದ್ದಾರೆ.
ಒಂದು ಕಡೆ ವಿಧಾನಸೌಧದಲ್ಲಿ "ಪಾಕಿಸ್ತಾನ ಜಿಂದಾಬಾದ್" ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಎಂದು ಹೇಳಿದ್ದಾರೆ.
ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿಕೆ ಹರಿಪ್ರಸಾದ್ ಹೇಳಿದ್ದಕ್ಕೆ ಕ್ಷಮೆ ಕೇಳಿದರಾ? ಎಂದು ಟೀಕಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದಿದ್ದಾರೆ.
"He who loves not his country can love nothing". ಅಂದರೆ "ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ" ಎನ್ನುವ ಮಾತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ "ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು" ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



