AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ತೀವ್ರ ಕುತೂಹಲ
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಕ್ಷದ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿರುವುದು ಸಾಮಾನ್ಯವಾದರೂ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಇಬ್ಬರ ಭೇಟಿ ಕುತೂಹಲಗಳನ್ನು ಮೂಡಿಸಿದೆ.
ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿರುವ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದರಲ್ಲಿ ಯಾವುದೇ ವಿಶೇಷವೇನು ಇಲ್ಲ. ಸೌಹಾರ್ದಯುತವಾಗಿ ಅವರನ್ನು ಭೇಟಿ ಮಾಡಿದ್ದೇನೆ ಅಷ್ಟೇ ಎಂದು ಹೇಳಿದರು.
ನಾವು ಸಂಪ್ರದಾಯದಂತೆ, ಪಕ್ಷದ ಅಧ್ಯಕ್ಷರು ಬೆಂಗಳೂರಿಗೆ ಆಗಮಿಸಿದಾಗ ಭೇಟಿಯಾಗಿ ಮಾತುಕತೆ ನಡೆಸುವುದು ವಾಡಿಕೆ. ಇಂದು ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸುಮಾರು ವಿಚಾರಗಳ ಬಗ್ಗೆ ಚರ್ಚಿಸಿದ್ದೇವೆ. ನನ್ನ ಇಲಾಖೆಯ ಕಾರ್ಯಗಳು, ರಾಜ್ಯದ ಅಭಿವೃದ್ಧಿ ಯೋಜನೆಗಳು ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.
ಕಳೆದ ಬಾರಿ ದಿಲ್ಲಿ ಪ್ರವಾಸಕ್ಕೆ ತೆರಳಿದಾಗಲೂ ಖರ್ಗೆ ಅವರು ಸಿಕ್ಕಿರಲಿಲ್ಲ. ಅವರ ಮಾರ್ಗದರ್ಶನ ನಮಗೆ ಅಗತ್ಯ. ನಮ್ಮ ಇಲಾಖೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಅವರು ನನ್ನ ಆರೋಗ್ಯವನ್ನು ವಿಚಾರಿಸಿದರು. ಜಿಲ್ಲಾ ಪ್ರವಾಸ ಮಾಡುತ್ತಿದ್ದೀರಾ? ಎಂದು ಕೇಳಿದರು. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅರ್ಹ ಮಹಿಳೆಯರಿಗೆ ಯೋಜನೆಯ ಹಣ ತಲುಪುತ್ತಿದ್ಯಾ, ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಕೇಳಿದರು ಎಂದು ತಿಳಿಸಿದರು.
ಇದೇ ವೇಳೆ ಬಾಕಿ ಉಳಿದಿದ್ದ ಏಪ್ರಿಲ್ ತಿಂಗಳ ಗೃಹ ಲಕ್ಷ್ಮಿ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಕ್ಷದ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿರುವುದು ಸಾಮಾನ್ಯವಾದರೂ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಹಾಗೂ ಸಚಿವೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಿಷ್ಠಾವಂತರು ಎಂದು ಪರಿಗಣಿಸಲಾಗಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



