ದಾವಣಗೆರೆ ದಕ್ಷಿಣ ದಂಗಲ್: ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ; ರಾಜೀನಾಮೆ ನೀಡುವಂತೆ ಸಿಎಂ ಸೂಚನೆ!
ಆಡಳಿತಾರೂಢ ಪಕ್ಷ ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರ ನಡುವೆ ಹೊತ್ತಿಕೊಂಡ ‘ಹುನ್ನಾರದ ಕಿಡಿ’ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಸ್ಥಾನಕ್ಕೂ ಸಂಚಕಾರ ತಂದೊಡ್ಡಿದೆ.

ಬೆಂಗಳೂರು: ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಕೊಡಬಹುದು ಅಂದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ಪ್ರಚಾರದಿಂದ ದೂರ ಉಳಿದಿದ್ದ ನಸೀರ್ ಅಹ್ಮದ್ ಅವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ತಾಕೀತು ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದರು.
ಎನ್.ಆರ್. ಪುರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಭಾನುವಾರ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ದಾವಣಗೆರೆ ಉಪ ಚುನಾವಣೆಯ ಉಸ್ತುವಾರಿಗೆ ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಯನ್ನು ನೇಮಿಸಿತ್ತು. ಅವರು ನೀಡಿದ ವರದಿ ಮೇಲೆ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ಆಡಳಿತಾರೂಢ ಪಕ್ಷ ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರ ನಡುವೆ ಹೊತ್ತಿಕೊಂಡ ‘ಹುನ್ನಾರದ ಕಿಡಿ’ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಸ್ಥಾನಕ್ಕೂ ಸಂಚಕಾರ ತಂದೊಡ್ಡಿದೆ. ನಸೀರ್‌ಗೆ ರಾಜೀನಾಮೆ ನೀಡುವಂತೆ ಅಧಿಕಾರಿಗಳ ಮೂಲಕ ಸ್ವತಃ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನು ಖುದ್ದು ತಮ್ಮ ಆಪ್ತರ ಬಳಿ ನಸೀರ್ ಅಹಮದ್ ಹೇಳಿಕೊಂಡಿದ್ದಾರೆ.
ಭಾನುವಾರ ಇಡೀ ದಿನ ನಸೀರ್ ಅಹಮದ್, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳವಣಿಗೆಗಳ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ. ಆದರೆ, ಸಿಎಂ ಭೇಟಿ ಸಾಧ್ಯವೇ ಆಗಿಲ್ಲ. ಇದರಿಂದಾಗಿ ಬೇಸರದಿಂದ ಹಿಂತಿರುಗಿದ್ದಾರೆ. ಈ ಮಧ್ಯೆ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅವರು ಸಿಎಂ ಜತೆ ಮಾತುಕತೆ ನಡೆಸಿದ್ದು, ರಾಜೀನಾಮೆ ಪಡೆಯಲು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ನಸೀರ್ ಅಹಮದ್ ಅವರ ವಿಧಾನ ಪರಿಷತ್ತಿನ ಸದಸ್ಯತ್ವ ಅವಧಿ ಬರುವ ಮೇನಲ್ಲಿ ಪೂರ್ಣಗೊಳ್ಳಲಿದೆ. ಹಾಗಾಗಿ, ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಪಡೆಯುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಒಂದು ದಿನದ ಹಿಂದಷ್ಟೇ ನಸೀರ್ ಅವರಿಗೆ ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷವು ಕಾರಣ ಕೇಳಿ ನೋಟಿಸ್ ನೀಡಿತ್ತು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗದೆ, ಪಕ್ಷದ ಒಂದಿಷ್ಟು ಅಲ್ಪಸಂಖ್ಯಾತ ಹಿರಿಯ ಮುಖಂಡರು ಪಕ್ಷವನ್ನು ಸೋಲಿಸಲು ಹುನ್ನಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವರಿಷ್ಠರು, ಮೇಲ್ಮನೆ ಸದಸ್ಯರಾದ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹಮದ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಬ್ಬಾರ್ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ನಸೀರ್ ಅವರೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



