ಶೇ.33 ಮಹಿಳಾ ಮೀಸಲಾತಿ: ಚುನಾವಣೆ ವೇಳೆ ನಾರಿಯರಿಂದ ಕಾಂಗ್ರೆಸ್'ಗೆ ತಕ್ಕ ಪಾಠ ನಿಶ್ಚಿತ- BJP
ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿಪಡಿಸುವ ಮೂಲಕ ಕೋಟ್ಯಾಂತರ ಮಹಿಳೆಯರಿಗೆ ದ್ರೋಹ ಮಾಡಿದೆ.

ಬೆಂಗಳೂರು: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿಯನ್ನು ಬಲಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಮುಂಬರುವ ದಿನಗಳಲ್ಲಿ ದೇಶದಾದ್ಯಂತ ನಾರಿಯರು ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಬಿಜೆಪಿ ಶನಿವಾರ ಹೇಳಿದೆ.
ಶೇ. 33 ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯವ್ಯಾಪಿ ಪ್ರತಿಭಟನೆ ಆರಂಭಿಸಿದೆ.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕರು, ಮಹಿಳೆಯರ ಹಕ್ಕುಗಳನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಆರೋಪಿಸಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಶೇ.33ರಷ್ಟು ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿಪಡಿಸುವ ಮೂಲಕ ಕೋಟ್ಯಾಂತರ ಮಹಿಳೆಯರಿಗೆ ದ್ರೋಹ ಮಾಡಿದೆ ಎಂದು ಹೇಳಿದರು.
ಮಹಿಳೆಯರ ಶಕ್ತಿಯನ್ನು ಲೆಕ್ಕಿಸದ ಕಾಂಗ್ರೆಸ್‌ಗೆ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಕೇವಲ ಮನೆ ಕೆಲಸಗಳಿಗೆ ಸೀಮಿತಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಮಹಿಳೆಯರಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಮನೋಭಾವ ಕಾಂಗ್ರೆಸ್‌ಗೆ ಇಲ್ಲ ಎಂದು ಟೀಕಿಸಿದರು. “ಮಹಿಳೆಯರು ಮನೆಯಲ್ಲೇ ಇರಬೇಕು ಎಂಬ ಮನಸ್ಥಿತಿ ಕಾಂಗ್ರೆಸ್‌ದ್ದಾಗಿದೆ” ಎಂದು ಕಿಡಿಕಾರಿದರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಮಾತನಾಡಿ, ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರನ್ನು ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. “ಮಹಿಳೆಯರಿಗೆ ರೂ.2000 ಹಣ ಬೇಡ, ಕಾನೂನು ರಚನೆಯಲ್ಲಿ ಸಮಾನ ಹಕ್ಕು ಬೇಕು” ಎಂದು ಆಗ್ರಹಿಸಿದರು.
ಇದೇ ವೇಳೆ ಬಿ.ಆರ್.ಅಂಬೇಡ್ಕರ್ ಅವರ ಪಾತ್ರವನ್ನು ಉಲ್ಲೇಖಿಸಿದ ಅವರು, ಮಹಿಳೆಯರ ಮತದಾನ ಹಕ್ಕು ಸಂವಿಧಾನದಲ್ಲಿ ಅಂಬೇಡ್ಕರ್ ಅವರಿಂದಲೇ ಖಚಿತವಾಗಿದೆ. ಕಾಂಗ್ರೆಸ್ ಎಂದಿಗೂ ಮಹಿಳಾ ಪರವಾಗಿರಲಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಕೆ.ಸಿ.ಮಂಜುಳಾ ಅವರು ಮಾತನಾಡಿ, ಮೈಸೂರು, ಗದಗ, ನೆಲಮಂಗಲ ಹಾಗೂ ಕೋಲಾರ ಸೇರಿದಂತೆ ಹಲವು ಭಾಗಗಳಲ್ಲಿ ಶನಿವಾರ ಪ್ರತಿಭಟನೆಗಳು ನಡೆದಿದ್ದು, ಭಾನುವಾರ ಬೆಂಗಳೂರು ಭಾಗದ ಮೂರು ಜಿಲ್ಲೆಗಳಲ್ಲಿ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ದೂರ ಮಾಡುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಅವರು ಮಾತನಾಡಿ, ಮಹಿಳೆಯರಿಗೆ ನಡೆದ ಈ ಅವಮಾನವನ್ನು ದೇಶದ ಮಹಿಳೆಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಸಂವಿಧಾನಬದ್ಧ ಹಕ್ಕು ರೂಪದಲ್ಲಿ ಮೀಸಲಾತಿ ಸಿಗಲಿದೆ ಎಂದು ನಿರೀಕ್ಷಿಸಿದ್ದೆವು. ಆದರೆ, ಅದು ವಿಫಲವಾದುದು ನಿರಾಶೆ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



