ರಾಜಕೀಯ

ದೆಹಲಿ ತೆರಳಿದ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

ಮೂಲಗಳ ಪ್ರಕಾರ, ಡಿಕೆ.ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ದೆಹಲಿ ತೆರಳಿದ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!
ಡಿ.ಕೆ.ಶಿವಕುಮಾರ್ — online desk
Published On :

ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಅಭ್ಯರ್ಥಿಗಳ ಪರ ವ್ಯಾಪಕ ಪ್ರಚಾರ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ದೆಹಲಿ ತೆರಳಿರುವ ಡಿಕೆ.ಶಿವಕುಮಾರ್ ಅವರು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ತಮ್ಮ ಶ್ರಮಕ್ಕೆ “ಪ್ರತಿಫಲ” ಕೋರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೂಲಗಳ ಪ್ರಕಾರ, ಡಿಕೆ.ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ಪೊನ್ನೇರಿ ಕ್ಷೇತ್ರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಇಬ್ಬರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಈ ಭೇಟಿಗೆ ಹೆಚ್ಚಿನ ಮಹತ್ವ ಸಿಕ್ಕಿದೆ.

ಇದೇ ವೇಳೆ, ಅವರ ಸಹೋದರ ಹಾಗೂ ಮಾಜಿ ಸಂಸದ ಡಿಕೆ.ಸುರೇಶ್ ಅವರು ತಮಿಳುನಾಡಿನಲ್ಲಿ ಸುಮಾರು 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರ ರೂಪಿಸಿ ಕಾರ್ಯನಿರ್ವಹಿಸಿದ್ದಾರೆಂದು ಹೇಳಲಾಗುತ್ತಿದ್ದು, ಇದರಿಂದ ಪಕ್ಷದೊಳಗೆ ಡಿಕೆ ಸಹೋದರರ ಪ್ರಭಾವ ಮತ್ತಷ್ಟು ಹೆಚ್ಚಿದೆ ಎನ್ನಲಾಗುತ್ತಿದೆ.

ಇನ್ನೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರ್‌ರಚನೆಗೆ ಹೈಕಮಾಂಡ್ ಅನುಮತಿ ಪಡೆಯಲು ಮುಂದಾಗಿರುವ ಹಿನ್ನೆಲೆಯಲ್ಲಿ, ಅದನ್ನು ತಡೆಹಿಡಿಯಲು ಡಿಕೆಶಿ ನಾಯಕತ್ವ ಬದಲಾವಣೆ ವಿಚಾರವನ್ನು ಮುಂದಿಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಡೆಹಲಿಯಲ್ಲಿರುವ ಡಿಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗುವ ದಿನಾಂಕವನ್ನು ನಿಗದಿಪಡಿಸದೇ ಇರುವುದು, ಹೈಕಮಾಂಡ್ ನಾಯಕರೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶವನ್ನು ಹೊಂದಿರುವುದನ್ನು ಸೂಚಿಸುತ್ತಿದೆ.

ಜೊತೆಗೆ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳ ವಿಷಯಗಳನ್ನು ಚರ್ಚಿಸುವ ಯೋಜನೆಯೂ ಇದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ನ್ಯಾಯಾಂಗ ಪ್ರಕರಣಗಳಲ್ಲಿ ವಾದಿಸುತ್ತಿರುವ ವಕೀಲರನ್ನು ಹಾಗೂ ತಮ್ಮ ವೈಯಕ್ತಿಕ ಪ್ರಕರಣಗಳನ್ನು ನಿಭಾಯಿಸುತ್ತಿರುವ ಕಾನೂನು ಸಲಹೆಗಾರರನ್ನೂ ಅವರು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ, ಡಿಕೆ.ಶಿವಕುಮಾರ್ ಅವರ ಈ ದೆಹಲಿ ಭೇಟಿ ಕೇವಲ ಸೌಜನ್ಯ ಭೇಟಿ ಅಲ್ಲದೆ, ರಾಜ್ಯ ಕಾಂಗ್ರೆಸ್ ರಾಜಕೀಯದ ಮುಂದಿನ ಹಂತವನ್ನು ನಿರ್ಧರಿಸುವ ಪ್ರಮುಖ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.