ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್; ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಂಕಾಳು ವೈದ್ಯ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿ, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಯತ್ನಿಸಿದರು. ಆದರೆ, ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ.

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಕಾಂಗ್ರೆಸ್‌ಗೆ ಮುಜುಗರ ಉಂಟುಮಾಡಿದ ಅಚ್ಚರಿಯ ಬೆಳವಣಿಗೆ ನಡೆದಿದೆ.
ನೂತನ ಸಚಿವರ ಅಧಿಕೃತ ಪಟ್ಟಿಯಲ್ಲಿ ಶಾಸಕ ಮಂಕಾಳು ವೈದ್ಯ ಅವರ ಹೆಸರು ಪ್ರಕಟವಾಗಿದ್ದರೂ, ಕೊನೆಯ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ.
ಈ ಕುರಿತು ಎಐಸಿಸಿ ಇದು "ಟೈಪಿಂಗ್ ಮಿಸ್ಟೇಕ್" ಎಂದು ಸ್ಪಷ್ಟನೆ ನೀಡಿದ್ದು, ತಿದ್ದುಪಡಿ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರನ್ನು ಕೈಬಿಟ್ಟು ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಅವಕಾಶ ನೀಡಲಾಗಿದೆ.
20 ನೂತನ ಸಚಿವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಪ್ರಕಟಿಸಿದ ಬಳಿಕ ಮಂಕಾಳು ವೈದ್ಯ ಅವರ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು. ಆದರೆ, ಕೆಲವೇ ಕ್ಷಣಗಳಲ್ಲಿ ಎಐಸಿಸಿ ಸ್ಪಷ್ಟನೆ ನೀಡಿ, ಅದು ಟೈಪಿಂಗ್ ದೋಷದಿಂದ ಪಟ್ಟಿಗೆ ಸೇರಿದ್ದ ಹೆಸರು ಎಂದು ತಿಳಿಸಿತು. ಮಂಕಾಳು ವೈದ್ಯ ಅವರ ಹೆಸರು ಅಂತಿಮ ಪಟ್ಟಿಯಲ್ಲಿರಲಿಲ್ಲ ಎಂದು ಎಐಸಿಸಿ ಹೇಳಿದೆ.
ಮಂಕಾಳು ವೈದ್ಯ ಅವರ ಬದಲಿಗೆ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಈ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಂಕಾಳು ವೈದ್ಯ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿ, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಯತ್ನಿಸಿದರು. ಆದರೆ, ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾನು ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ. ಅವರು ಸಿಕ್ಕಿಲ್ಲ. ಮತ್ತೊಮ್ಮೆ ಬರುತ್ತೇನೆ" ಎಂದು ಹೇಳಿ ಅಲ್ಲಿಂದ ತೆರಳಿದರು.
ಇನ್ನೊಂದೆಡೆ, ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಿರುವುದರ ಹಿಂದೆಯೂ ರಾಜಕೀಯ ಬೆಳವಣಿಗೆಗಳಿವೆ ಎನ್ನಲಾಗಿದೆ.
ಸಚಿವ ಸ್ಥಾನ ದೊರೆಯದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೈಕಮಾಂಡ್‌ಗೆ ತಿಳಿಸಿದ್ದರು ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಕೇಳಿಬಂದಿದೆ. ಅಲ್ಲದೆ, ತಮ್ಮ ಕುಟುಂಬದ ರಾಜಕೀಯ ಸ್ಥಾನಗಳ ಬಗ್ಗೆಯೂ ಕಠಿಣ ನಿಲುವು ವ್ಯಕ್ತಪಡಿಸಿದ್ದರಿಂದ ಕೊನೆಯ ಕ್ಷಣದಲ್ಲಿ ಹೈಕಮಾಂಡ್ ನಿರ್ಧಾರ ಬದಲಿಸಿ, ಅವರಿಗೆ ಸಚಿವ ಸ್ಥಾನ ನೀಡಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.
ಆದರೆ, ಈ ಕುರಿತು ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತವಾಗಿ ಯಾವುದೇ ಕಾರಣವನ್ನು ಪ್ರಕಟಿಸಲಾಗಿಲ್ಲ. ಎಐಸಿಸಿ ಮಾತ್ರ ಮಂಕಾಳು ವೈದ್ಯ ಅವರ ಹೆಸರು ಪಟ್ಟಿಗೆ ಸೇರ್ಪಡೆಯಾಗಿದ್ದು, ಕೇವಲ ಟೈಪಿಂಗ್ ದೋಷದಿಂದ ಎಂದು ಸ್ಪಷ್ಟನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



