'ಸಿಎಂ ಬದಲಿಸಿದಾಗಲೆಲ್ಲಾ ಪಕ್ಷಕ್ಕೆ ತೊಂದರೆಯಾಗಿದೆ': ಕೆ.ಎನ್ ರಾಜಣ್ಣ
ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ನಾನು ಮೊದಲಿನಿಂದಲೂ ಸಚಿವ ಸ್ಥಾನ ಕೇಳಿರಲಿಲ್ಲ. ಸಚಿವರ ಪಟ್ಟಿಯಲ್ಲಿ ಗೊಂದಲವಾಗಿದ್ದು, ಮೂರು ಬಾರಿ ಪಟ್ಟಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿದ ಅನೇಕ ನಾಯಕರಿಗೆ ಅಸಮಾಧಾನವಾಗಿದೆ, ಹಲವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ ಕೂಡ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಮಾಜಿ ಸಚಿವ ಕೆಎನ್ ರಾಜಣ್ಣ ಈ ಸಂದರ್ಭದಲ್ಲಿ ಮಾತನಾಡಿ, ಈ ಹಿಂದೆ ಮುಖ್ಯಮಂತ್ರಿಗಳನ್ನು ಬದಲಿಸಿದ ಸಂದರ್ಭಗಳಲ್ಲಿ ಪಕ್ಷಗಳಿಗೆ ಆಗಿರುವ ಪರಿಣಾಮ ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದೇ ಈಗಾಗಲೇ ದೊಡ್ಡ ಡ್ಯಾಮೇಜ್. ಈ ಹಿಂದೆ ಮುಖ್ಯಮಂತ್ರಿ ಬದಲಾವಣೆಯಾದ ಸಂದರ್ಭಗಳಲ್ಲಿ ಪಕ್ಷಗಳಿಗೆ ಉಂಟಾದ ಪರಿಣಾಮವನ್ನು ಗಮನಿಸಬೇಕಿದೆ ಎಂದು ಹೇಳಿದ್ದಾರೆ.
ತಮಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ನಾನು ಮೊದಲಿನಿಂದಲೂ ಸಚಿವ ಸ್ಥಾನ ಕೇಳಿರಲಿಲ್ಲ. ಸಚಿವರ ಪಟ್ಟಿಯಲ್ಲಿ ಗೊಂದಲವಾಗಿದ್ದು, ಮೂರು ಬಾರಿ ಪಟ್ಟಿಯನ್ನು ತಿದ್ದುಪಡಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಸಚಿವ ಸ್ಥಾನ ವಂಚಿತರಾದ ಶಾಸಕರು ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವುದು ಸಹಜ. ಆದರೆ ಅಸಮಾಧಾನ ಅಥವಾ ಬಂಡಾಯ ಪಕ್ಷದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲರೂ ಪಕ್ಷದ ಹಿತದೃಷ್ಟಿಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶ ನೀಡಿದ್ದಾರೆ.
ಡಿಕೆಶಿ ಒಳ್ಳೆ ಸಂಘಟಕ
ಸಿಎಂ ಡಿಕೆ ಶಿವಕುಮಾರ್ ಅವರ ಕಾರ್ಯವೈಖರಿಯ ಬಗ್ಗೆಯೂ ರಾಜಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಒಳ್ಳೆಯ ಸಂಘಟಕ. ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನು ಅವರು ಮಾಡುತ್ತಾರೆ. ಅದನ್ನು ನಾನು ಮ್ಯಾನಿಪ್ಯುಲೇಷನ್ ಎಂದು ಹೇಳುವುದಿಲ್ಲ ಎಂದು ರಾಜಣ್ಣ ಹೇಳಿದ್ದಾರೆ.
ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ರಾಜೀನಾಮೆ ನೀಡಿದರೆ ಅದನ್ನು ಅಂಗೀಕರಿಸುವಂತೆ ಹೈಕಮಾಂಡ್ ಸೂಚನೆ ನೀಡಿರುವ ವಿಚಾರಕ್ಕೆ ಹೈಕಮಾಂಡ್ ಅಂತಹ ಸೂಚನೆ ನೀಡಿದ್ದರೆ, ಅದರಂತೆ ಮುಖ್ಯಮಂತ್ರಿ ನಡೆದುಕೊಳ್ಳಬೇಕು. ಹೈಕಮಾಂಡ್‌ನ ತೀರ್ಮಾನವನ್ನು ನಾವು ಪ್ರಶ್ನಿಸಲು ಸಾಧ್ಯವೇ ಎಂದು ರಾಜಣ್ಣ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲಾವಾರು ಪ್ರಾತಿನಿಧ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿತ್ತು. ಕೋಲಾರ ಜಿಲ್ಲೆಗೆ ಯಾರಿಗೂ ಸಚಿವ ಸ್ಥಾನ ನೀಡಲಾಗಿಲ್ಲ. ಕೆಲವು ಜಿಲ್ಲೆಗಳಿಗೂ ಪ್ರಾತಿನಿಧ್ಯ ಸಿಕ್ಕಿಲ್ಲ. ಇದರಿಂದ ಆ ಜಿಲ್ಲೆಗಳ ಅಭಿವೃದ್ಧಿ ಹಾಗೂ ಆಡಳಿತದ ಮೇಲೂ ಪರಿಣಾಮ ಬೀರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಗೈರಾಗಿದ್ದರ ಬಗ್ಗೆಯೂ ಪ್ರತಿಕ್ರಿಯಿಸಿದ ರಾಜಣ್ಣ, ಅವರು ಉದ್ದೇಶಪೂರ್ವಕವಾಗಿ ಗೈರಾಗಿದ್ದಾರೆಯೇ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ತಡವಾದರೂ ಕೊನೆಗೂ ನಡೆದಿದೆ. ನೂತನ ಸಚಿವರಿಗೆ ಅಭಿನಂದನೆಗಳು. ರಾಜ್ಯದಲ್ಲಿನ ಬರ ಪರಿಸ್ಥಿತಿ ಎದುರಿಸಲು ಎಲ್ಲರೂ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




