ಸಂಪುಟ ಪುನಾರಚನೆ: ರಾಹುಲ್ ಗಾಂಧಿ ಅಂಗಳದಲ್ಲಿ ಚೆಂಡು.. ಯಾರ ಹೆಸರು ಫೈನಲ್?
ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಕೆಲ ಶಾಸಕರನ್ನು ಸಮಾಧಾನಪಡಿಸಲು ಕೈಗೊಳ್ಳಲಿರುವ ಸಣ್ಣ ಪ್ರಮಾಣದ ಸಚಿವ ಸಂಪುಟ ಪುನಾರಚನೆ ಕುರಿತು ಅಂತಿಮ ತೀರ್ಮಾನವನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೈಗೊಳ್ಳಲಿದ್ದಾರೆ.
ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ಭಾನುವಾರ ತಡರಾತ್ರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾದರು. ನಿನ್ನೆ ಬೆಳಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದರು.
ಡಿ ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ 19 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಪಟ್ಟಿಯನ್ನು ವರಿಷ್ಠರು ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂನ್ 3ರಂದು ಡಿ ಕೆ ಶಿವಕುಮಾರ್ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ 13 ಸಚಿವರ ಖಾತೆಗಳಲ್ಲಿಯೂ ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅವು ಹೇಳಿವೆ.
ಖಾತೆ ಪುನರ್‌ಹಂಚಿಕೆ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ ಅವರು ದೆಹಲಿಯಲ್ಲಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ. ಇದೇ ಖಾತೆಯ ಮೇಲೆ ಕಣ್ಣಿಟ್ಟಿರುವ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
ಖಾತೆ ಹಂಚಿಕೆ ಕುರಿತು ನಿನ್ನೆ ಮಾತನಾಡಿದ ಡಿ ಕೆ ಶಿವಕುಮಾರ್, ಭಾನುವಾರ ಸಂಜೆ ದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ನೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ. ನಿನ್ನೆ ಸಂಜೆಯೊಳಗೆ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ ಎಂದು ಹೇಳಿದರು.
ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒಬ್ಬರು ಅಥವಾ ಇಬ್ಬರು ಸಚಿವರನ್ನು ಕೈಬಿಡುವ ವಿಚಾರವನ್ನು ಹೈಕಮಾಂಡ್ ಹೇಗೆ ನಿಭಾಯಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಇದಲ್ಲದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಪ್ರಸ್ತಾಪವನ್ನೂ ಪರಿಗಣಿಸಬೇಕಾಗಿದೆ. ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದಾಗ, ಈ ಬೇಡಿಕೆಯನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ವಿಚಾರವನ್ನು ಶಿವಕುಮಾರ್ ಹೈಕಮಾಂಡ್ ಗಮನಕ್ಕೂ ತಂದಿದ್ದಾರೆ.
ಸಿದ್ದರಾಮಯ್ಯ ಅವರ ಬೇಡಿಕೆಯನ್ನು ಈಡೇರಿಸದಿದ್ದರೆ, ಆಗಸ್ಟ್ 13ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಿಂದ ಅವರು ದೂರ ಉಳಿಯುವ ಸಾಧ್ಯತೆ ಇದೆ. ಇದರಿಂದ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ತಮ್ಮ ಮೊದಲ ಅಧಿವೇಶನವನ್ನು ನಿರ್ವಹಿಸುವುದು ಕಷ್ಟವಾಗಬಹುದು ಎಂದು ಮೂಲವೊಂದು ತಿಳಿಸಿದೆ.
ಸಚಿವ ಸಂಪುಟದಲ್ಲಿ ಮಹಿಳಾ ಸದಸ್ಯರಿಲ್ಲದಿರುವ ವಿಚಾರವನ್ನೂ ಪರಿಹರಿಸಬೇಕಾಗಿದೆ. ಒಂದು ಸಚಿವ ಸ್ಥಾನವನ್ನು ಖಾಲಿ ಉಳಿಸಿಕೊಳ್ಳಲಾಗಿದೆ.
ಈ ಮಧ್ಯೆ, ಚಾಮರಾಜನಗರ ಶಾಸಕ ಹಾಗೂ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು, ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಪಕ್ಷದ ನಾಯಕತ್ವದ ನಿರ್ಧಾರಗಳಿಗೆ ಬದ್ಧರಾಗಿರುವುದಾಗಿ ಅವರು ಪುನರುಚ್ಚರಿಸಿದರು.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುಟ್ಟರಂಗಶೆಟ್ಟಿ, ಒಂದು ಅಥವಾ ಎರಡು ದಿನಗಳಲ್ಲಿ ಖಾತೆ ಹಂಚಿಕೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಅಸಮಾಧಾನಗೊಂಡಿರುವ ಶಾಸಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಹ್ವಾನ ನೀಡಿದ್ದಾರೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಪುಟ್ಟರಂಗಶೆಟ್ಟಿ, ಕುಮಾರಸ್ವಾಮಿ ಇಂತಹ ರಾಜಕೀಯ ತಂತ್ರಗಳನ್ನು ಅನುಸರಿಸುವುದು ಹೊಸದೇನಲ್ಲ ಎಂದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧವೂ ಸಚಿವರು ತೀವ್ರ ವಾಗ್ದಾಳಿ ನಡೆಸಿದರು. ಪಕ್ಷದಲ್ಲಿ ಅವರು ಪ್ರಮುಖ ಸ್ಥಾನಗಳನ್ನು ಹೇಗೆ ಪಡೆದುಕೊಂಡರು ಎಂದು ಪ್ರಶ್ನಿಸಿದ ಪುಟ್ಟರಂಗಶೆಟ್ಟಿ, ಅವರು ಹಣ ಕೊಟ್ಟಿರುವುದರಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಎಂಎಲ್‌ಸಿ ಆಗಲು ಬಿಜೆಪಿ ನಾಯಕರಿಗೆ ಎಷ್ಟು ಹಣ ಕೊಟ್ಟರು ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



