ವಿಧಾನಮಂಡಲ ಮುಂಗಾರು ಅಧಿವೇಶನ ಇಂದು ಆರಂಭ; ಸರ್ಕಾರ-ಪ್ರತಿಪಕ್ಷಗಳ ತಂತ್ರ-ಪ್ರತಿತಂತ್ರ
ಬಹುಕೋಟಿ ರೂಪಾಯಿ ಮೌಲ್ಯದ ಎಸ್‌ಟಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮಗಳ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಬಗ್ಗೆಯೂ ಪ್ರಶ್ನಿಸಲು ಅವರು ನಿರ್ಧರಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಇಂದು ಗುರುವಾರ ಆರಂಭವಾಗಲಿದೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿ ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರ ಮತ್ತು ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು.
ಆಗಸ್ಟ್ 13ರಿಂದ 27ರವರೆಗೆ ನಡೆಯಲಿರುವ 10 ದಿನಗಳ ಅಧಿವೇಶನದಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ, ನೈಸ್ ಸಂಸ್ಥೆಯ ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ, ಕರ್ನಾಟಕ ಲೋಕಸೇವಾ ಆಯೋಗದಲ್ಲಿನ (ಕೆಪಿಎಸ್‌ಸಿ) ಅಕ್ರಮಗಳ ಆರೋಪ, ಪೊಲೀಸ್ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾಪಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.
ಬಹುಕೋಟಿ ರೂಪಾಯಿ ಮೌಲ್ಯದ ಎಸ್‌ಟಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮಗಳ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ಬಗ್ಗೆಯೂ ಪ್ರಶ್ನಿಸಲು ಅವರು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ನಾಯಕರೊಂದಿಗಿನ ಸಭೆಯಲ್ಲಿ ಡಿ ಕೆ ಶಿವಕುಮಾರ್ ಅವರು ಹಿರಿಯ ಸಚಿವರು ಹೊಸದಾಗಿ ಸಚಿವರಾಗಿರುವವರಿಗೆ ಬೆಂಬಲ ನೀಡಬೇಕು ಎಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿಪಕ್ಷಗಳು ಯಾವುದೇ ಸಚಿವರನ್ನು ಗುರಿಯಾಗಿಸಿಕೊಂಡು ಟೀಕಿಸಿದರೆ, ಅವರ ಬೆಂಬಲಕ್ಕೆ ನಿಲ್ಲುವಂತೆ ಅವರು ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಬಿಡದಿ ಟೌನ್‌ಶಿಪ್ ಅಭಿವೃದ್ಧಿ ಯೋಜನೆ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತಿದರೆ, ತಾವೇ ಉತ್ತರಿಸುವುದಾಗಿ ಡಿ ಕೆ ಶಿವಕುಮಾರ್ ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ನಿನ್ನೆಯಷ್ಟೇ ನೂತನವಾಗಿ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.
ವಿಧಾನಸಭೆಯ ನೂತನ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಮತ್ತು ಉಪಸಭಾಪತಿ ಆಯ್ಕೆ ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ತನ್ನ ಶಾಸಕ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.
ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿ ಪುಟ್ಟಣ್ಣ ಕಾರ್ಯನಿರ್ವಹಿಸಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಚುನಾವಣೆ ಶುಕ್ರವಾರ ನಡೆಯಲಿದ್ದು, ಸಲೀಂ ಅಹ್ಮದ್ ಅವರು ಇಂದು ಗುರುವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಮೊದಲ ದಿನದಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿ ಕಲಾಪ ಮುಂದೂಡಲಿದ್ದು, ಸೋಮವಾರದಿಂದ ಪೂರ್ಣ ಪ್ರಮಾಣದ ಚರ್ಚೆಗಳು ಕಾವು ಪಡೆದುಕೊಳ್ಳಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



