ಸಚಿವ ನಾಗೇಂದ್ರ ರಾಜೀನಾಮೆಗೆ ಬಿಡದ BJP ಪಟ್ಟು: ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಗಳು ಸಚಿವ ನಾಗೇಂದ್ರ ಮೇಲೆ ಇದ್ದು ಎಸ್‌ಐಟಿ ತನಿಖೆಯಲ್ಲಿ ಕ್ಲೀನ್‌ಚಿಟ್ ದೊರೆತಿದ್ದರೂ, ಇಡಿ ಮತ್ತು ಸಿಬಿಐ ಆರೋಪಪಟ್ಟಿ ಸಲ್ಲಿಸಿದ್ದು, ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಬೆಂಗಳೂರು: ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ಸೋಮವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇಂದು ಬೆಳಗ್ಗೆ 9.30ಕ್ಕೆ ಫ್ರೀಡಂ ಪಾರ್ಕ್‌ನಿಂದ ಪ್ರತಿಭಟನೆ ಆರಂಭವಾಗಲಿದೆ. ಬಳಿಕ ಪಕ್ಷದ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇತರ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾವು ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ 2024ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಿಂದ ನಾಗೇಂದ್ರ ಅವರನ್ನು ಕೈಬಿಡಲಾಗಿತ್ತು. ಎಸ್‌ಐಟಿ ತನಿಖೆಯಲ್ಲಿ ಕ್ಲೀನ್‌ಚಿಟ್ ದೊರೆತಿದ್ದರೂ, ಜಾರಿ ನಿರ್ದೇಶನಾಲಯ (ED) ಮತ್ತು ಸಿಬಿಐ ಆರೋಪಪಟ್ಟಿ ಸಲ್ಲಿಸಿದ್ದು, ಸದ್ಯ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.
ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಎನ್‌ಡಿಎ ಪಟ್ಟು ಬಿಡದ ಹಿನ್ನೆಲೆಯಲ್ಲಿ ಸತತ ಐದು ದಿನಗಳ ಕಾಲ ವಿಧಾನಮಂಡಲ ಅಧಿವೇಶನದ ಕಲಾಪಗಳು ಅಸ್ತವ್ಯಸ್ತಗೊಂಡಿದ್ದವು. ನಾಗೇಂದ್ರ ರಾಜೀನಾಮೆ ನೀಡಿದ ಬಳಿಕವಷ್ಟೇ ಕಲಾಪಗಳು ಸುಗಮವಾಗಿ ನಡೆಯಲು ಅವಕಾಶ ನೀಡುವುದಾಗಿ ಎನ್‌ಡಿಎ ಪಟ್ಟು ಹಿಡಿದಿತ್ತು.
ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಭಟನೆ ಮುಂದುವರಿಸುವಂತೆ ಸೂಚಿಸಿದ್ದು, ಜೆಡಿಎಸ್‌ನ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅಶೋಕ್ ವಿವರಿಸಿದರು.
ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಲೇ ಬಂದಿದೆ. ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಹಗಲು-ರಾತ್ರಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವಿಚಾರವನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಜನರೂ ನಾಗೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ದಲಿತರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿರುವುದರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಇದರಿಂದ ಇಡೀ ಸರ್ಕಾರವೇ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.
ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಅಕ್ರಮವಾಗಿ ಪಡೆದು ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಳಸಲಾಗಿದೆ ಎಂಬುದನ್ನು ಸಾಬೀತುಪಡಿಸುವ ದಾಖಲೆಗಳನ್ನು ತಾವು ಒದಗಿಸಿದ್ದಾಗಿ ಪ್ರತಿಪಕ್ಷ ನಾಯಕ ಅಶೋಕ್ ಆರೋಪಿಸಿದರು.
ತಮ್ಮ ಪ್ರತಿಭಟನೆಗೆ ಹೆದರಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಪ್ರತಿಪಕ್ಷಗಳ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ಆರೋಪಿಸಿದ ಅಶೋಕ್, ದಲಿತರಿಗೆ ಮೀಸಲಾದ ಹಣವನ್ನು ಸಮರ್ಪಕವಾಗಿ ಬಳಸುವಂತೆ ನೋಡಿಕೊಳ್ಳುವುದು ತಮ್ಮ ಸಾರ್ವಜನಿಕ ಹೊಣೆಗಾರಿಕೆಯಾಗಿದೆ ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ರಾಜ್ಯಪಾಲರು ಸಂವಿಧಾನದ ಪ್ರಕಾರ ನಾಗೇಂದ್ರ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ ಎಂದು ಹೇಳುತ್ತಾರೆ. ಆದರೆ, ಸಚಿವ ಸಂಪುಟವನ್ನು ಹೇಗೆ ರಚಿಸಬೇಕು ಎಂಬುದನ್ನು ಸುಪ್ರೀಂ ಕೋರ್ಟ್‌ನ ಆದೇಶ ಸ್ಪಷ್ಟಪಡಿಸಿದೆ. ಸಚಿವ ಸ್ಥಾನವೆಂದರೆ ಕೇವಲ ಅಧಿಕಾರವಲ್ಲ. ಸಂವಿಧಾನಾತ್ಮಕ ನೈತಿಕತೆ ಮತ್ತು ಜನರ ವಿಶ್ವಾಸ ಇರಬೇಕು. ನಾಗೇಂದ್ರ ಅವರಲ್ಲಿ ಇವೆರಡರ ಯಾವುದೇ ಲಕ್ಷಣ ಕಾಣುತ್ತಿಲ್ಲ ಎಂದು ಅಶೋಕ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



