"ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ": ಚರ್ಚೆಗೆ ಗ್ರಾಸವಾದ CM ಸಿದ್ದರಾಮಯ್ಯ ಪೋಸ್ಟ್
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿರುವ ಸಮಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ.
ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ. ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು ಎಂದು ಸಿಎಂ ಹೇಳಿದ್ದಾರೆ.
ಅವಕಾಶ ವಂಚಿತರ ಪರ ನಿಂತವರನ್ನು ವರ್ತಮಾನವು ಕ್ರೂರವಾಗಿ ನಡೆಸಿಕೊಂಡಿದೆ
ಸಾಮಾಜಿಕ ನ್ಯಾಯದ ಬಂಡಿಯನ್ನು ಮುಂದಕ್ಕೆ ಎಳೆದುಕೊಂಡು ಹೋಗುವುದು ಸುಲಭದ ಕೆಲಸ ಅಲ್ಲ ಎನ್ನುವುದನ್ನು ನಾನು ಅನುಭವದ ಮೂಲಕ ಅರಿತುಕೊಂಡಿದ್ದೇನೆ. ಈ ಪ್ರಯತ್ನ ನಡೆಸಿದವರೆಲ್ಲರನ್ನು ವರ್ತಮಾನ ಬಹಳ ಕ್ರೂರವಾಗಿ ನಡೆಸಿಕೊಂಡಿದೆ. ನಾನು ಸಾಮಾಜಿಕ ನ್ಯಾಯದ ಪರವಾಗಿ ದನಿ ಎತ್ತುವ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನವನ್ನು ಮಾಡಿದಾಗೆಲ್ಲ ನನ್ನ ವಿರುದ್ಧ ದಾಳಿಗಳು ನಡೆದಿವೆ, ಇದು ಈಗಲೂ ಮುಂದುವರಿಯುತ್ತಿದೆ.
ನನ್ನ ವಿರುದ್ಧ ಯಾಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವುದೂ ನನಗೆ ಗೊತ್ತಿದೆ. ನಾನು ಈ ರಾಜ್ಯದ ಬಡವರು, ಶೋಷಿತರು, ಅವಕಾಶ ವಂಚಿತರ ಪರವಾಗಿದ್ದೇನೆ, ಸಾಮಾಜಿಕ ನ್ಯಾಯದ ಪರವಾಗಿದ್ದೇನೆ, ಸಂವಿಧಾನದ ಪರವಾಗಿದ್ದೇನೆ, ಶೋಷಿತರ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದೇನೆ, ದುರ್ಬಲರಿಗೆ ಅನ್ಯಾಯವಾದಾಗ ದನಿ ಎತ್ತಿದ್ದೇನೆ. ಇದಕ್ಕಾಗಿ ರಾಜ್ಯದ ಜನತೆ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಇದು ನಮ್ಮ ರಾಜಕೀಯ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಸರಣಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



