ರಾಜಕೀಯ

ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಹೈಕಮಾಂಡ್ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಿಎಂ ಸಿದ್ದರಾಮಯ್ಯ

ಶಾಸಕರು ತಮ್ಮ ಆಸೆ ವ್ಯಕ್ತಪಡಿಸುವುದು ತಪ್ಪಲ್ಲ. ಸಚಿವ ಸ್ಥಾನ ನೀಡಿ ಎಂದು ಅವರು ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಮೊದಲ ಬಾರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಕೈಗೊಂಡಿದ್ದೇವೆ.

ರಾಜ್ಯದ ರಾಜಕೀಯ ಬೆಳವಣಿಗೆ ಕುರಿತು ಹೈಕಮಾಂಡ್ ನಿರ್ಧಾರಕ್ಕೆ ಸಂಪೂರ್ಣ ಬದ್ಧ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಉಡುಪಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ಸಂಪೂರ್ಣವಾಗಿ ಬದ್ಧನಾಗಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಕಾರ್ಕಳ ಭೇಟಿ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ ನಿರ್ಧಾರವನ್ನು ನಾವು ಅನುಸರಿಸುತ್ತೇವೆ” ಎಂದು ಹೇಳಿದರು.

ಮೊದಲ ಬಾರಿ ಶಾಸಕರಾದವರು ಮಂತ್ರಿಯಾಗಬೇಕು ಎಂದು ಬೇಡಿಕೆ ಇಟ್ಟಿರುವ ಬಗ್ಗೆ ಹಾಗೂ ಈ ಸಂಬಂಧ ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್‌ ಶಾಸಕರ ಪೈಕಿ ಕೆಲವರು ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿ, ಶಾಸಕರು ತಮ್ಮ ಆಸೆ ವ್ಯಕ್ತಪಡಿಸುವುದು ತಪ್ಪಲ್ಲ. ಸಚಿವ ಸ್ಥಾನ ನೀಡಿ ಎಂದು ಅವರು ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ. ಎಲ್ಲಾ ಶಾಸಕರಿಗೂ ತಾವು ಸಚಿವರಾಗಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದು ಸಹಜ. ಇದರಲ್ಲಿ ತಪ್ಪೇನಿಲ್ಲ. ಆದರೆ, ಮೊದಲ ಬಾರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಕೈಗೊಂಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ಸೂಚನೆ ಇದೆ. ಹೈಕಮಾಂಡ್‌ ಸೂಚನೆಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಕುರಿತು ಮಾತನಾಡಿ, ಸರ್ಕಾರ ಹಂತ ಹಂತವಾಗಿ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದರು.

ಒಳ ಮೀಸಲಾತಿ ಸಂಬಂಧಿತ ವಿಷಯಗಳಿಂದ ನೇಮಕಾತಿಯಲ್ಲಿ ವಿಳಂಬವಾಗಿದ್ದು, ರಾಜ್ಯ ಬಜೆಟ್‌ನಲ್ಲಿ ಅಗತ್ಯ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆ ದಾಳಿಗಳ ಹೆಚ್ಚಳ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಅರಣ್ಯದಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ಅಳವಡಿಸುವುದು ಹಾಗೂ ವಿಶೇಷ ಕಾರ್ಯಪಡೆ ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸರ್ಜಾಪುರ ಸಮೀಪದ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಆಸ್ತಿ ಧ್ವಂಸ ಆರೋಪದ ಕುರಿತು ಮಾತನಾಡಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಆಗುಂಬೆ ಸುರಂಗ ರಸ್ತೆ ಯೋಜನೆ ಬಗ್ಗೆ ಪರಿಸರವಾದಿಗಳೊಂದಿಗೆ ಚರ್ಚಿಸಿ ಅವರ ಆಕ್ಷೇಪಣೆಗಳನ್ನು ಅರಿತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪರಶುರಾಮ ಥೀಮ್ ಪಾರ್ಕ್, ಬ್ರಹ್ಮಾವರ ಸಕ್ಕರೆ ಕಾರ್ಖಾನೆ, ಕಾರ್ಕಳ ನರ್ಸಿಂಗ್ ಕಾಲೇಜು ಹಾಗೂ ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದ ಸಮಸ್ಯೆಗಳನ್ನೂ ಪರಿಹರಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.