ಗೃಹಲಕ್ಷ್ಮಿ ಯೋಜನೆ ಅಕ್ರಮಗಳ ತನಿಖೆಗೆ SIT ರಚಿಸಿ: ರಾಜ್ಯ ಸರ್ಕಾರಕ್ಕೆ BJP ಆಗ್ರಹ
ಯೋಜನೆಯಡಿ ಎರಡು ತಿಂಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿರಲಿಲ್ಲ. ಈ ವಿಚಾರ ವಿಧಾನಸಭೆಯಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸರ್ಕಾರ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬುಧವಾರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಡಿ ನಕಲಿ ಬ್ಯಾಂಕ್ ಖಾತೆಗಳಿಗೆ ಹಾಗೂ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ ಹಣ ಜಮೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವನ್ನು ಲೆಕ್ಕಪರಿಶೋಧಕ ಮತ್ತು ಮಹಾಲೆಕ್ಕಪಾಲಕರ (CAG) ವರದಿಯಲ್ಲೂ ಉಲ್ಲೇಖಿಸಲಾಗಿದೆ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 5,000 ಕೋಟಿ ರೂ. ಮೊತ್ತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿಲ್ಲ ಎಂದು ಆರೋಪಿಸಿದ ರವಿ, ಈ ಹಣ ದುರುಪಯೋಗ ಅಥವಾ ಅಕ್ರಮವಾಗಿ ವರ್ಗಾವಣೆಯಾಗಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.
"ಫಲಾನುಭವಿಗಳ ಖಾತೆಗೆ ಜಮೆಯಾಗಬೇಕಿದ್ದ ಹಣವನ್ನು ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿದೆಯೇ? ಈ ಪ್ರಕರಣದಲ್ಲಿ ಇದುವರೆಗೆ ಏಕೆ ಎಫ್‌ಐಆರ್ ದಾಖಲಿಸಿಲ್ಲ?" ಎಂದು ಪ್ರಶ್ನಿಸಿದರು.
ಯೋಜನೆಯಡಿ ಎರಡು ತಿಂಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿರಲಿಲ್ಲ. ಈ ವಿಚಾರ ವಿಧಾನಸಭೆಯಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆದರೂ ಸರ್ಕಾರ ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಇದೇ ವೇಳೆ, ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ವಿವಿಧ ಷರತ್ತುಗಳನ್ನು ವಿಧಿಸುತ್ತಿರುವ ಕ್ರಮವನ್ನೂ ಸಿ.ಟಿ. ರವಿ ಖಂಡಿಸಿದರು. ಸರ್ಕಾರ ಜನರಿಗೆ ನೀಡಿರುವ ಭರವಸೆಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



