ಸಚಿವ ಸಂಪುಟ ವಿಸ್ತರಣೆ: CM ಸೇರಿದಂತೆ ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ನಾಳೆ ಸೋಮವಾರ ಸಂಜೆ 6 ಗಂಟೆಗೆ ದೆಹಲಿಗೆ ಪಕ್ಷದ ಹೈಕಮಾಂಡ್ ಕರೆದಿದೆ.

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು,ದೆಹಲಿಯಲ್ಲಿ ನಡೆದಿದ್ದ ನೀಟ್ (NEET) ಪ್ರತಿಭಟನೆಗಳೂ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ನಾಳೆ ಸೋಮವಾರ ಸಂಜೆ 6 ಗಂಟೆಗೆ ದೆಹಲಿಗೆ ಪಕ್ಷದ ಹೈಕಮಾಂಡ್ ಕರೆದಿದೆ.
ಎಲ್ಲವೂ ಯೋಜನೆಯಂತೆ ನಡೆದರೆ, 20 ಮಂದಿ ಹೊಸ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಮಂಗಳವಾರ ಅಥವಾ ಬುಧವಾರ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸಾರ್ಹ ಮೂಲಗಳು ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್ ಗೆ(The New Indian Express) ತಿಳಿಸಿವೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ನಿನ್ನೆ ಬೆಂಗಳೂರಿನಲ್ಲಿ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಯಾವುದೇ ಕ್ಷಣದಲ್ಲಿ ನಡೆಯಬಹುದು ಎಂದು ತಿಳಿಸಿದ್ದರು. ಆಗಸ್ಟ್ ಮೊದಲ ವಾರದಲ್ಲಿ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿರುವುದರಿಂದ, ಸಚಿವ ಸಂಪುಟ ವಿಸ್ತರಣೆಯನ್ನು ಮತ್ತಷ್ಟು ಮುಂದೂಡಲು ಹೈಕಮಾಂಡ್‌ಗೆ ಅವಕಾಶವಿಲ್ಲ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ನಾಯಕರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಸಭೆ ನಡೆಸಿ, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಆದರೆ ಆ ಪಟ್ಟಿಗೆ ರಾಹುಲ್ ಗಾಂಧಿ ಅವರ ಅಂತಿಮ ಒಪ್ಪಿಗೆ ಅಗತ್ಯವಿದೆ.
ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿರುವುದರಿಂದ ಪಟ್ಟಿಯಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆಯೂ ಇದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭಿಪ್ರಾಯವೂ ಈ ಪ್ರಕ್ರಿಯೆಯಲ್ಲಿ ಮಹತ್ವದ್ದಾಗಿರಲಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಸಚಿವ ಸ್ಥಾನಾಕಾಂಕ್ಷಿಗಳು ಮತ್ತೆ ತಮ್ಮ ಲಾಬಿಯನ್ನು ಚುರುಕುಗೊಳಿಸಿದ್ದು, ಅವರಲ್ಲಿ ಕೆಲವರು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಅವರು ಮತ್ತೊಮ್ಮೆ ದೆಹಲಿಗೆ ತೆರಳುವ ಸಾಧ್ಯತೆಯೂ ಇದೆ.
ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು (ST) ಹಾಗೂ ಲಿಂಗಾಯತ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧಿತ್ವ ನೀಡುವ ಉದ್ದೇಶದಿಂದ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ.
ಭವಿಷ್ಯದಲ್ಲಿ ಚುನಾವಣೆಯಲ್ಲಿ ವಿವಿಧ ಸಮುದಾಯಗಳನ್ನು ಪಕ್ಷದತ್ತ ಸೆಳೆಯಲು ಈ ತಂತ್ರ ಪಕ್ಷದ ಸಂಘಟನಾ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ಕಾರಣದಿಂದ ಡಿ ಕೆ ಶಿವಕುಮಾರ್ ಈ ಪ್ರಸ್ತಾವನೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ಜೊತೆಗೆ, ಬಿ.ಕೆ. ಹರಿಪ್ರಸಾದ್ ಕೂಡ ಉಪ ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಯಾಗಿ ಎರಡೂ ಹುದ್ದೆಗಳನ್ನು ನಿರ್ವಹಿಸಿದ್ದ ಡಿ ಕೆ ಶಿವಕುಮಾರ್ ಅವರ ಮಾದರಿಯಲ್ಲೇ, ಬಿ ಕೆ ಹರಿಪ್ರಸಾದ್ ಅವರನ್ನೂ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಬಿ ಕೆ ಹರಿಪ್ರಸಾದ್ ಆಪ್ತ ಶಾಸಕರೊಬ್ಬರು ತಿಳಿಸಿದ್ದಾರೆ.
ಪ್ರಾದೇಶಿಕ, ಜಾತಿ ಹಾಗೂ ಲಿಂಗ ಸಮತೋಲನವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಕನಿಷ್ಠ ಇಬ್ಬರು ಮಹಿಳಾ ಶಾಸಕರನ್ನು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




