ರಾಜಕೀಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪ್ರಮಾಣ?

ಮಂಗಳವಾರ ಸಂಜೆ ದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಕೆ.ಸಿ. ವೇಣುಗೋಪಾಲ್ ಅವರ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪ್ರಮಾಣ?
ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದೆ.

ಸಂಪುಟ ಸೇರಲಿರುವ ಹೊಸ ಸಚಿವರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಮುದ್ರೆ ಪಡೆಯಲು ಇಂದು (ಬುಧವಾರ, ಜುಲೈ 29, 2026) ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರಮುಖ ಸಭೆ ನಡೆಯಲಿದೆ ಎನ್ನಲಾಗುತ್ತಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ, ನಾಳೆ (ಗುರುವಾರ, ಜುಲೈ 30, 2026) ಸಂಜೆ 5:00 ಗಂಟೆಗೆ ರಾಜಭವನ ಅಥವಾ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ.

ಮಂಗಳವಾರ ಸಂಜೆ ದೆಹಲಿಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದರು.

ಮೂಲಗಳ ಪ್ರಕಾರ, ಸಚಿವರಾಗಲಿರುವ ಶಾಸಕರ ಪಟ್ಟಿಯನ್ನು ಬಹುತೇಕ ಅಂತಿಮಗೊಳಿಸಲಾಗಿದ್ದು, ಈಗ ರಾಹುಲ್ ಗಾಂಧಿ ಅವರ ಒಪ್ಪಿಗೆ ಮಾತ್ರ ಬಾಕಿಯಿದೆ. ಬುಧವಾರ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅಂತಿಮ ಸಭೆ ನಡೆಯುವ ಸಾಧ್ಯತೆಯಿದೆ ಎಂದು ತಿಳಿದಿಬಂದಿದೆ.

ಈ ನಡುವೆ ರಾಜಭವನಕ್ಕೆ ಈಗಾಗಲೇ ಗುರುವಾರ ಸಂಜೆ 5 ಗಂಟೆಗೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣವಚನ ಸಮಾರಂಭ ನಡೆಸುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಧ್ಯಪ್ರದೇಶದಲ್ಲಿದ್ದು, ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಮರಳುವ ನಿರೀಕ್ಷೆಯಿದೆ. ಗುರುವಾರ ಸಾಧ್ಯವಾಗದಿದ್ದರೆ ಶುಕ್ರವಾರ ಪ್ರಮಾಣವಚನ ಸಮಾರಂಭ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಯಾರಿಗೆ ಸಚಿವ ಸ್ಥಾನ?

ವೇಣುಗೋಪಾಲ್ ಅವರು ಹಲವು ನಾಯಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ, ಅವರ ಸಚಿವ ಸ್ಥಾನ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು.

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸುವ ವಿಚಾರವೂ ಚರ್ಚೆಗೆ ಬಂದಿದೆ. ವೇಣುಗೋಪಾಲ್ ಅವರು ಜಮೀರ್ ಪರವಾಗಿದ್ದರೆ, ಸಿದ್ದರಾಮಯ್ಯ ಅವರು ಅದಕ್ಕೆ ಒಪ್ಪಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಂ, ಶಾಸಕರಾದ ಎ.ಎಸ್. ಪೊನ್ನಣ್ಣ, ಹಂಪನಗೌಡ ಬಾದರ್ಲಿ, ಬಸವರಾಜ ಶಿವಣ್ಣನವರ್ ಹಾಗೂ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಪರವಾಗಿ ಸಿದ್ದರಾಮಯ್ಯ ಬಲವಾಗಿ ವಾದ ಮಂಡಿಸಿದ್ದಾರೆ ಎನ್ನಲಾಗಿದೆ.

ಜಮೀರ್ ಕ್ಷಮೆಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ, ಕೆ.ಸಿ. ವೇಣುಗೋಪಾಲ್ ಅವರ ಸಲಹೆಯಂತೆ ಜಮೀರ್ ಅಹ್ಮದ್ ಖಾನ್ ಅವರು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಬೇಷರತ್ ಕ್ಷಮೆಯಾಚಿಸಿದ್ದಾರೆಂದು ತಿಳಿದುಬಂದಿದೆ.

ಇದರ ಬೆನ್ನಲ್ಲೇ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಮೀರ್ ಹೇಳಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಸಂಬಂಧ ಹದಗೆಟ್ಟಿದ್ದರೂ, ಕೇರಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಜಮೀರ್ ನೀಡಿದ ಕೊಡುಗೆಯನ್ನು ವೇಣುಗೋಪಾಲ್ ಪರಿಗಣಿಸಿದ್ದಾರೆ ಎನ್ನಲಾಗಿದೆ.

2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ಅವರ ಮೂಲಕ ನಡೆಸಲಾದ ಆಂತರಿಕ ಸಮೀಕ್ಷೆಯ ಆಧಾರದ ಮೇಲೆಯೇ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಸಮುದಾಯದ ಮೇಲೆ ಪ್ರಭಾವ ಹೊಂದಿರುವ, ಪ್ರಾದೇಶಿಕವಾಗಿ ಬಲಿಷ್ಠರಾಗಿರುವ ಹಾಗೂ ಮುಂದಿನ ಚುನಾವಣೆಯಲ್ಲಿ ಗೆಲುವು ತಂದುಕೊಡುವ ಸಾಮರ್ಥ್ಯವಿರುವ ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.

ಸ್ಪೀಕರ್, ಪರಿಷತ್ ಸಭಾಪತಿ ಹುದ್ದೆಗಳ ಕುರಿತೂ ಚರ್ಚೆ

ಇದೇ ವೇಳ ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ವಿಧಾನಸಭೆ ಸಭಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸಭಾಪತಿ ಹುದ್ದೆಗಳಿಗೂ ಹೈಕಮಾಂಡ್ ಅಂತಿಮ ಹೆಸರುಗಳನ್ನು ನಿರ್ಧರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹುದ್ದೆಗಳಿಗೆ ಮಾಜಿ ಸಚಿವರಾದ ಎಚ್.ಕೆ. ಪಾಟೀಲ್ ಹಾಗೂ ಎನ್.ಎಸ್. ಬೋಸರಾಜು ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.