'ಟ್ರಬಲ್ ಶೂಟರ್' ಡಿಕೆಶಿಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಒಂದು ಕಿಚ್ಚನ್ನು ನಂದಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅಸಮಾಧಾನ ಸ್ಫೋಟಗೊಂಡಿದೆ.

ಬೆಂಗಳೂರು: ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಖಾತೆ ಹಂಚಿಕೆಯ ಟ್ರಬಲ್ ಮುಂದುವರೆದಿದ್ದು, ಸಚಿವ ರಾಮಲಿಂಗಾರೆಡ್ಡಿ ಹಚ್ಚಿದ ಅಸಮಾಧಾನದ ಕಿಚ್ಚು ಈಗ ಕಾಡ್ಗಿಚ್ಚಾಗಿ ಬದಲಾಗೋ ಆತಂಕ ಎದುರಾಗಿದೆ.
ಮೊದಲ ಹಂತದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಒಂದು ಕಿಚ್ಚನ್ನು ನಂದಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅಸಮಾಧಾನ ಸ್ಫೋಟಗೊಂಡಿದೆ.
ತಾವು ಬೆಂಗಳೂರು ನಗರಾಭೀವೃದ್ಧಿ ಖಾತೆಯನ್ನು ನಿರ್ವಹಿಸಬೇಕೆಂದರೆ, ಬೆಂಗಳೂರು ನಗರದ ಪ್ರಮುಖ ಆರ್ಥಿಕ ಮತ್ತು ಆಡಳಿತಾತ್ಮಕ ಶಕ್ತಿ ಕೇಂದ್ರಗಳಾಗಿರುವ ಬಿಡಿಎ(ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ(ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ವ್ಯಾಪ್ತಿಗಳನ್ನೂ ಸಹ ತಮ್ಮ ಸುಪರ್ದಿಗೆ ನೀಡಬೇಕೆಂದು ಕೃಷ್ಣ ಬೈರೇಗೌಡ ಅವರು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, BDA ಮತ್ತು BMRDA ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆಗೆ ಹೆಚ್ಚಿನ ಮಹತ್ವವಿಲ್ಲ ಎಂದು ಕೃಷ್ಣ ಬೈರೇಗೌಡ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಗಮನಕ್ಕೂ ತಂದಿದ್ದು, ಈ ಕುರಿತು ದೂರವಾಣಿ ಮೂಲಕ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ.
ಬಿಡಿಎ ಮತ್ತು ಬಿಎಂಆರ್‌ಡಿಎ – ಪ್ರಾಧಿಕಾರಗಳನ್ನು ತನ್ನ ಖಾತೆಯ ವ್ಯಾಪ್ತಿಗೆ ಸೇರಿಸುವಂತೆ ಅವರು ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಗಮನಕ್ಕೆ ತಂದಿದ್ದಾರೆ. ಆದರೂ, ರಾಜ್ಯ ನಾಯಕತ್ವದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಕೃಷ್ಣ ಬೈರೇಗೌಡ ಅವರು ಸ್ವತಃ ದೆಹಲಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಕೃಷ್ಣ ಬೈರೇಗೌಡ ಅವರು ಹೈಕಮಾಂಡ್ ಮಟ್ಟದಲ್ಲೇ ತಮ್ಮ ಬೇಡಿಕೆಯನ್ನು ಈಡೇರಿಸಿಕೊಳ್ಳಲು ನೇರವಾಗಿ ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಸುರ್ಜೇವಾಲ ಸೇರಿದಂತೆ ಕೇಂದ್ರದ ಪ್ರಮುಖ ನಾಯಕರನ್ನು ಭೇಟಿ ಮಾಡಿ ತಮಗಾಗಿರುವ ಅನ್ಯಾಯ ಹಾಗೂ ಬಿಡಿಎ-ಬಿಎಂಆರ್‌ಡಿಎ ಪ್ರಾಧಿಕಾರಗಳ ಅಗತ್ಯತೆಯ ಕುರಿತು ಮನವರಿಕೆ ಮಾಡಿಕೊಡಲಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




