Bidadi township ವಿವಾದ: ದಾಖಲೆ ಬಿಡುಗಡೆಗೆ ಸಿದ್ಧ; ಸಿಎಂ ಶಿವಕುಮಾರ್'ಗೆ HD kumaraswamy ಸವಾಲು
ನನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲು ಅಗತ್ಯ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಅಧಿಕಾರಿಗಳ ಮೂಲಕ ಪರಿಹಾರ ವಿತರಿಸುವ ಬದಲು ಸ್ಥಳೀಯ ಶಾಸಕರ ಮೂಲಕ ಚೆಕ್‌ಗಳನ್ನು ಹಂಚಲಾಗುತ್ತಿದೆ.

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಮಹತ್ವಾಕಾಂಕ್ಷೆಯ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ತೀವ್ರಗೊಂಡಿದೆ.
ಯೋಜನೆಗೆ ತಾವು ವಿರೋಧ ವ್ಯಕ್ತಪಡಿಸಿರುವುದಕ್ಕೆ ದಾಖಲೆಗಳ ಮೂಲಕವೇ ಉತ್ತರ ನೀಡಲು ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2007ರಲ್ಲಿ ತಾವು ಮುಖ್ಯಮಂತ್ರಿ ಆಗಿದ್ದ ವೇಳೆ ಯೋಜನೆ ಕುರಿತು ಚರ್ಚೆಗಳು ನಡೆದಿದ್ದವು. ಆದರೆ, ಪ್ರಸ್ತುತ ರಾಜ್ಯ ಸರ್ಕಾರ ಯೋಜನೆಯನ್ನು ಜಾರಿಗೆ ತರುತ್ತಿರುವ ರೀತಿಯ ಬಗ್ಗೆ ಹಲವು ಪ್ರಶ್ನೆಗಳಿವೆ ಎಂದು ಹೇಳಿದರು.
"ನನ್ನ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಲು ಅಗತ್ಯ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಅಧಿಕಾರಿಗಳ ಮೂಲಕ ಪರಿಹಾರ ವಿತರಿಸುವ ಬದಲು ಸ್ಥಳೀಯ ಶಾಸಕರ ಮೂಲಕ ಚೆಕ್‌ಗಳನ್ನು ಹಂಚಲಾಗುತ್ತಿದೆ. ರೈತರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಈ ಯೋಜನೆ ಕುರಿತು ಸರ್ಕಾರದ ನಿಲುವು ಏನಿತ್ತು ಎಂಬುದನ್ನು ಜನರೂ ತಿಳಿದುಕೊಳ್ಳಬೇಕು. ಅದಕ್ಕಾಗಿ ಅಗತ್ಯ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬಿಡದಿ ಟೌನ್‌ಶಿಪ್ ಯೋಜನೆಯ “ಪಿತಾಮಹ” ಕುಮಾರಸ್ವಾಮಿ. "ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೇ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಬಳಿಕ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರವೂ ಯೋಜನೆಯನ್ನು ಮುಂದುವರಿಸಿತ್ತು. ನಾವು ಹೊಸದಾಗಿ ಏನನ್ನೂ ಮಾಡುತ್ತಿಲ್ಲ. ಈಗಾಗಲೇ ಆರಂಭವಾಗಿರುವ ಯೋಜನೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆ" ಎಂದು ಸ್ಪಷ್ಟಪಡಿಸಿದ್ದರು.
ಇದೇ ವೇಳೆ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದ್ದ ಅವರು, ರೈತರಿಗೆ ಹಿಂದೆ ಪ್ರಸ್ತಾಪಿಸಲಾಗಿದ್ದ 40 ಶೇಕಡಾ ಅಭಿವೃದ್ಧಿಪಡಿಸಿದ ಭೂಮಿಯ ಬದಲು ಈಗ 50 ಶೇಕಡಾ ಅಭಿವೃದ್ಧಿಪಡಿಸಿದ ಭೂಮಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



