ಸಚಿವ ಸಂಪುಟ ವಿಸ್ತರಣೆ ಕಸರತ್ತು: ಜೂನ್ 27ಕ್ಕೆ ದೆಹಲಿಗೆ CM ಡಿಕೆಶಿ; ಕೇರಳ ರೆಸಾರ್ಟ್‌ನಲ್ಲಿ ಸಿದ್ದು 'ಕ್ಯಾಂಪ್'; ಹೆಚ್ಚಿದ ಕುತೂಹಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಜೂನ್ 28ರಂದು ಭಾರತಕ್ಕೆ ಮರಳುವ ನಿರೀಕ್ಷೆಯಿದೆ. ಅವರ ಆಗಮನದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ನಿರ್ಧಾರಗಳು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಐದು ದಿನಗಳ ವಿಶ್ರಾಂತಿಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದಾರೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸೇರಿದ ರೆಸಾರ್ಟ್‌ನಲ್ಲಿ ಅವರು ತಂಗಲಿದ್ದು, ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರಾದ ಹಂಪನಗೌಡ ಬಾದರ್ಲಿ ಮತ್ತು ಎ.ಎಸ್. ಪೊನ್ನಣ್ಣ ಸಹ ಅವರೊಂದಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಹಲವು ಶಾಸಕರು ತಮ್ಮದೇ ರೀತಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸಲೀಂ ಅಹ್ಮದ್, ಅಶೋಕ್ ಪಟ್ಟಣ, ವಿಜಯಾನಂದ ಕಾಶಪ್ಪನವರ್, ಶರತ್ ಬಚ್ಚೇಗೌಡ, ಎ.ಆರ್. ಕೃಷ್ಣಮೂರ್ತಿ ಸೇರಿದಂತೆ ಹಲವರು ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ವಿಧಾನಸಭೆ ಸಭಾಧ್ಯಕ್ಷರ ಹುದ್ದೆಗೆ ಬಿ.ಆರ್. ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ಎಚ್.ಕೆ. ಪಾಟೀಲ್ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ, ಈ ಹುದ್ದೆ ಸ್ವೀಕರಿಸಲು ಅವರು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



