ದಲಿತರ ಮೇಲಿನ ದೌರ್ಜನ್ಯದಲ್ಲಿ ಕಾಂಗ್ರೆಸ್ ಕರ್ನಾಟಕಕ್ಕೆ ಕುಖ್ಯಾತಿ ತಂದಿದೆ, ಮೊದಲು ಈ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳಿ: ಪ್ರಿಯಾಂಕ್ ಖರ್ಗೆಗೆ BJP ಟಾಂಗ್
ಚಿಕ್ಕಬಳ್ಳಾಪುರದ ಜೈ ಭೀಮ್ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದ ಘಟನೆಯನ್ನೂ ಉಲ್ಲೇಖಿಸಿರುವ ಅವರು, ಇದು ದಲಿತ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ,

ಬೆಂಗಳೂರು: ರಾಜ್ಯದಲ್ಲಿ ದಲಿತರ ಹಕ್ಕುಗಳನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿಯೇ ಕೈಯಿಂದ ಮಲ ಹೊರುವ (ಮ್ಯಾನುಯಲ್ ಸ್ಕ್ಯಾವೆಂಜಿಂಗ್) ಪದ್ಧತಿ ಮುಂದುವರಿದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, ತುಮಕೂರು ನಗರದ ಕೆಇಬಿ ಎಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ನಾಲ್ವರು ಕಾರ್ಮಿಕರಿಂದ ಸೆಪ್ಟಿಕ್ ಟ್ಯಾಂಕ್ ಅನ್ನು ಕೈಯಿಂದ ಸ್ವಚ್ಛಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ, ಅಲ್ಲದೆ, ಇತ್ತೀಚೆಗೆ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಬಾಲ ಕಾರ್ಮಿಕನನ್ನು ಇದೇ ರೀತಿಯ ಕೆಲಸಕ್ಕೆ ಬಳಸಿಕೊಂಡಿದ್ದ ಘಟನೆ ಉಲ್ಲೇಖಿಸಿ, ಈ ಬಗ್ಗೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (SCSP-TSP) ನಿಧಿಯ ರೂ.53,059.45 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದ ಅವರು, ಎಸ್‌ಸಿ ಮತ್ತು ಎಸ್‌ಟಿ ಅಭಿವೃದ್ಧಿ ನಿಗಮಗಳಿಗೆ ನೀಡುವ ಅನುದಾನವನ್ನು ಕೂಡ ಕಡಿತಗೊಳಿಸಲಾಗಿದೆ ಎಂದು ದೂರಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿರುವ ಅವರು, 2025ರಲ್ಲಿ ಮಾತ್ರ 2,277 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದ ಜೈ ಭೀಮ್ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿದ್ದ ಘಟನೆಯನ್ನೂ ಉಲ್ಲೇಖಿಸಿರುವ ಅವರು, ಇದು ದಲಿತ ವಿದ್ಯಾರ್ಥಿಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ದಲಿತರು ಎದುರಿಸುತ್ತಿರುವ ಅನ್ಯಾಯಗಳ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



