ಪಂಚ ರಾಜ್ಯಗಳ ಚುನಾವಣೆಯ ನಂತರ ಸಚಿವ ಸಂಪುಟ ಪುನಾರಚನೆ; ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾಲು ಇದೆ: ಸಲೀಂ ಅಹ್ಮದ್
ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ. ಈ ವೇಳೆ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದರು.

ವಿಜಯಪುರ: ಐದು ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ. ಈ ವೇಳೆ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದು ಹೇಳಿದರು.
ಇದೇ ವೇಳೆ, ಅಧಿಕಾರ ಹಂಚಿಕೆ ಹಾಗೂ ಸಿಎಂ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2.9 ವರ್ಷವಾಗಿದೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ಐದು ಗ್ಯಾರಂಟಿಗಳ ಅನುಷ್ಠಾನದೊಂದಿಗೆ ಆರನೇ ಗ್ಯಾರಂಟಿಯಾಗಿ 2.20 ಲಕ್ಷ ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ ಎಂದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷಗಳಾಗಿವೆ. ಆದರೆ, ಬಿಜೆಪಿ ಸರ್ಕಾರ ಮಾತಿಗೆ ತಪ್ಪಿದ ಸರ್ಕಾರವಾಗಿದೆ. 15 ಲಕ್ಷ ರೂ. ಕೊಡಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬೆಲೆ ಏರಿಕೆ ನಿಯಂತ್ರಣ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದರು.
ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಈ ವಿಷಯದಲ್ಲಿ ನಾವ್ಯಾರೂ ಮಾತನಾಡದಂತೆ ಹೈಕಮಾಂಡ್ ಲಕ್ಷ್ಮಣ ರೇಖೆ ಹಾಕಲಾಗಿದೆ ಎಂದು ಹೇಳಿದರು.
2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಕಾರ್ಯಾಧ್ಯಕ್ಷನಾಗಿ ನನ್ನ ಪಾಲು ಇದೆ. ಅಂದು ನನ್ನ ಜೊತೆ ಕಾರ್ಯಾಧ್ಯಕ್ಷರಾಗಿದ್ದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಅವರಿಗೆ ಈಗಾಗಲೇ ಸಚಿವರಾಗುವ ಅವಕಾಶ ಸಿಕ್ಕಿದೆ. ಹೀಗಾಗಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಅವಕಾಶ ಲಭಿಸುವ ವಿಶ್ವಾಸ ಇದೆ ಎಂದು ಆಶಯ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



