ಅಭಿವೃದ್ಧಿಯಲ್ಲ, ಅಧಿಕಾರವೇ ಮುಖ್ಯ: ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ರಾಜ್ಯದ ಖಜಾನೆ ಖಾಲಿಯಾಗಿದೆ. ಸರ್ಕಾರಿ ನೌಕರರಿಗೆ ವೇತನ ನೀಡಲು ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲು ಸಹ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಹಾಸನ: ರಾಜ್ಯ ಸರ್ಕಾರ ಅಭಿವೃದ್ಧಿಗಿಂತ ಅಧಿಕಾರದ ರಾಜಕೀಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ರಾಜ್ಯ ಸರ್ಕಾರ ಹಣಕಾಸು ಶಿಸ್ತು ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ರಾಜ್ಯದ ಒಟ್ಟು ಸಾಲ ₹8.5 ಲಕ್ಷ ಕೋಟಿ ತಲುಪಿದ್ದು, ಇದು ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ಎಂದು ಹೇಳಿದರು.
ರಾಜ್ಯದ ಖಜಾನೆ ಖಾಲಿಯಾಗಿದೆ. ಸರ್ಕಾರಿ ನೌಕರರಿಗೆ ವೇತನ ನೀಡಲು ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿಗೊಳಿಸಲು ಸಹ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.
ಗ್ಯಾರಂಟಿಗಳಿಗೆ ಹೆಚ್ಚಿನ ಅನುದಾನ, ಅಭಿವೃದ್ಧಿ ನಿರ್ಲಕ್ಷ್ಯ
ಇದೇ ವೇಳೆ ಬಿಜೆಪಿ ಉಚಿತ ಯೋಜನೆಗಳ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾಮಗಾರಿಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಹೆಚ್ಚಿನ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುತ್ತಿದೆ ಎಂದು ಆರೋಪಿಸಿದರು.
“ಸರ್ಕಾರದ ಅವಧಿ ಮುಗಿಯುವ ವೇಳೆಗೆ ರಾಜ್ಯದ ಸಾಲ ₹10 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ ಎಂದೂ ಎಚ್ಚರಿಸಿದರು.
ಬಿಪಿಎಲ್ ಕಾರ್ಡ್ ಬದಲಾವಣೆ ವಿರುದ್ಧ ಆಕ್ರೋಶ
ಬಳಿಕ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಅಶೋಕ್, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಇಬ್ಬರೂ ನಾಯಕತ್ವದ ಕಿತ್ತಾಟದಲ್ಲೇ ನಿರತರಾಗಿದ್ದು, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಕಿಡಿಕಾರಿದರು.
ಸರ್ಕಾರದ ನೀತಿಗಳಿಂದ ಜನರು ಬೇಸತ್ತಿದ್ದಾರೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.
ಅಲ್ಪಸಂಖ್ಯಾತರ ಓಲೈಕೆ ಆರೋಪ
ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ನಿಲ್ಲಿಸಿ, ಅಭಿವೃದ್ಧಿಗೆ ಆದ್ಯತೆ ನೀಡಬೇಕು. ರಾಜ್ಯ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸುತ್ತಿದೆ ಎಂದು ಆರೋಪಿಸಿದರು.
ವಸತಿ ನೀಡದ ಸರ್ಕಾರದ ವಿರುದ್ಧ ಅಸಮಾಧಾನ
ಇದೇ ವೇಳೆ ತಮಗೆ ಅಧಿಕೃತ ಸರ್ಕಾರಿ ನಿವಾಸ ನೀಡದ ಮೂಲಕ ರಾಜ್ಯ ಸರ್ಕಾರ ಅವಮಾನ ಮಾಡಿದೆ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು.
“2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪ್ರತಿಪಕ್ಷ ನಾಯಕರಿಗೆ ಯಾವುದೇ ಸರ್ಕಾರಿ ನಿವಾಸ ನೀಡುವುದಿಲ್ಲ ಎಂದೂ ಎಚ್ಚರಿಕೆ ನೀಡಿದರು.
ಮೇ 29ಕ್ಕೆ ‘ಭಟ್ಕಳ ಚಲೋ’
ಭಟ್ಕಳದಲ್ಲಿ ನಿರ್ಮಾಣ ಹಂತದ ಕಟ್ಟಡವನ್ನು ಸ್ಥಳೀಯ ಆಡಳಿತ ತೆರವುಗೊಳಿಸಿದ ಬಳಿಕ ನಡೆದ ಕೋಮು ಘರ್ಷಣೆಗಳನ್ನು ಖಂಡಿಸಿ, ಬಿಜೆಪಿ ಘಟಕವು ಮೇ 29ರಂದು ‘ಭಟ್ಕಳ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಅಶೋಕ್ ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



