ರಾಜಕೀಯ

KPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಇಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕುಮಾರಸ್ವಾಮಿ ವಿರುದ್ದವೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

KPSC ಹಗರಣ: ಕುಮಾರಸ್ವಾಮಿ ವಿರುದ್ದವೇ ಪ್ರಾಸಿಕ್ಯೂಷನ್ ಅಸ್ತ್ರ? ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ - ಸಿಎಂ ಡಿಕೆ ಶಿವಕುಮಾರ್
Published On :

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯುತ್ತಿದ್ದು, ಇದೀಗ ರಾಜ್ಯ ಸರ್ಕಾರ ಸಾಲು ಸಾಲು ಆರೋಪಗಳನ್ನು ಮಾಡುತ್ತಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನಿನ್ನೆಯಷ್ಟೇ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಹಿಂದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್(RDPR) ಸಚಿವರಾಗಿದ್ದಾಗ ನಡೆದ ಸಹಾಯಕ ಕಾರ್ಯಪಾಲಕ ಎಂಜಿನಿಯರ್(AEE) ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.

ಇದರ ಮಧ್ಯೆ, ಇಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕುಮಾರಸ್ವಾಮಿ ವಿರುದ್ದವೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಸಿಬಿಐ ತನಿಖೆಗೆ ಪ್ರಾಸಿಕ್ಯೂಷನ್‌ ಅನುಮತಿಗೆ ರಾಜ್ಯಪಾಲರು, ರಾಜ್ಯ ಸರ್ಕಾರದ ಅಭಿಪ್ರಾಯ ಕೇಳಿದ್ದಾರೆ. ಹೀಗಾಗಿ ನಾಗೇಂದ್ರ ನೆಪದಲ್ಲಿ ಕುಮಾರಸ್ವಾಮಿ ವಿರುದ್ಧವೂ ಸಿಬಿಐ ತನಿಖೆಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.

ಕುಮಾರಸ್ವಾಮಿ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡೋದಕ್ಕಾಗಿ ರಾಜ್ಯಪಾಲರ ಮೇಲೆ ಒತ್ತಡ ತರೋದಕ್ಕೂ ರಾಜ್ಯ ಸರ್ಕಾರದ ಕಾರ್ಯತಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ನಾಗೇಂದ್ರ ಅವರ ಜೊತೆಗೆ ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ರೇಣುಕಾಚಾರ್ಯ ಅವರ ಫೈಲ್‌ಗಳಿಗೂ ರಾಜ್ಯ ಸರ್ಕಾರ ಅಭಿಪ್ರಾಯ ನೀಡುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ನಿಮ್ಮ ವಿರುದ್ಧ ಪ್ರಾಸಿಕ್ಯೂಷನ್ ನಡಸೋ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಸುದ್ದಿಗಾರರು ಗಮನ ಸೆಳೆದಾಗ, "ನನ್ನ ಮೇಲೆ ಯಾವ ತನಿಖೆ ಬೇಕಾದರೂ ಮಾಡಿಕೊಳ್ಳಲಿ. ಎಷ್ಟು ವರ್ಷ ಬೇಕಾದರೂ ತನಿಖೆ‌ ಮಾಡಲಿ. ಅದರಲ್ಲಿ ಏನೂ ಇಲ್ಲ. ಆ ಪ್ರಕರಣದಲ್ಲಿ ಏನೇನು ಇಲ್ಲವೆಂದು ಎಲ್ಲರಿಗೂ ಗೊತ್ತಿದೆ. ಆದರೂ ಅದನ್ನು ಇಟ್ಟುಕೊಂಡು ನನ್ನ ಬಾಯಿ ಮುಚ್ಚಿಸಲು ಪ್ರಯತ್ನ ಮಾಡುತ್ತಲೇ ಇದ್ದಾರೆ" ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.