ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆಗೆ ರಾಹುಲ್ ಗಾಂಧಿ ಆಕ್ಷೇಪ
ಕರ್ನಾಟಕದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನದ ವಿಷಯವನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದು, ಅದನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(CWC) ಸದಸ್ಯ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಈ ವೇಳೆ ಅವರು ಪಕ್ಷ ಮತ್ತು ಕರ್ನಾಟಕದ ರಾಜಕೀಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಕರ್ನಾಟಕದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನದ ವಿಷಯವನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದು, ಅದನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ರಾಹುಲ್ ಗಾಂಧಿಗೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜಕೀಯ ಮತ್ತು ಸಾಂಸ್ಥಿಕ ಅವಕಾಶಗಳ ಕುರಿತು ನಿರ್ಧಾರ ಕೈಗೊಳ್ಳುವಾಗ 'ಅಹಿಂದ' ವರ್ಗಗಳ ಹಿತಾಸಕ್ತಿಗಳನ್ನು ರಕ್ಷಿಸುವ ಅಗತ್ಯವನ್ನೂ ಸಿದ್ದರಾಮಯ್ಯ ಅವರು ಒತ್ತಿಹೇಳಿದ್ದಾರೆ ಎಂದು ತಿಳಿದುಬಂದಿದೆ.
ಜಾತಿ ಗಣತಿ ವರದಿ ಜಾರಿಗೆ ಮನವಿ
ಇದೇ ವೇಳೆ ಕರ್ನಾಟಕದಲ್ಲಿ ಜಾತಿ ಗಣತಿ ವರದಿಯನ್ನು ಶೀಘ್ರವಾಗಿ ಜಾರಿಗೆ ತರುವಂತೆಯೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ ಒತ್ತಾಯಿಸಿದ್ದಾರೆ.
ಜಾತಿ ಗಣತಿ ವರದಿಯ ಶಿಫಾರಸುಗಳನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಬೇಕು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ ನಿವೃತ್ತಿ ಕುರಿತು ಬಹಿರಂಗ ಹೇಳಿಕೆ ನೀಡಬೇಡಿ
2028ರ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಇದೀಗ ಈ ವಿಚಾರವಾಗಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯನವರಿಗೆ ಒಂದಿಷ್ಟು ಸಲಹೆ ನೀಡಿದ್ದು, ರಾಜಕೀಯ ನಿವೃತ್ತಿ ಕುರಿತು ಸಾರ್ವಜನಿಕವಾಗಿ ಪದೇಪದೇ ಹೇಳಿಕೆ ನೀಡಬೇಡಿ ಎಂದು ಹೇಳಿದ್ದಾರೆ.
ನಿಮ್ಮ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಪಕ್ಷಕ್ಕೆ ನಿಮ್ಮಂತಹ ಹಿರಿಯ ನಾಯಕರ ಅವಶ್ಯಕತೆ ಬಹಳ ಇದೆ. ಹೀಗಾಗಿ ಇಂತಹ ಹೇಳಿಕೆ ನೀಡಬೇಡಿ ಎಂದು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯಗೆ ಹೇಳಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರನ್ನು ಭೇಟಿಯಾದ ನಂತರ, ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಮತ್ತು ಸಂಸದ ಕೆ.ಸಿ. ವೇಣುಗೋಪಾಲ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



