ಬಿಬಿಎಂಪಿ ಚುನಾವಣೆಗೆ 8 ವಾರ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಹೇಗಾದರೂ ಸರಿ...

ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಸುಪ್ರೀಂ ಕೋರ್ಟ್ 8 ವಾರಗಳ ಕಾಲಾವಕಾಶ ನೀಡಿದೆ.
ಬಿಬಿಎಂಪಿ ಚುನಾವಣೆಯನ್ನು ಹೇಗಾದರೂ ಸರಿ ಮುಂದೂಡಲೇಬೇಕೆಂಬ ಹಠಕ್ಕೆ ಬಿದ್ದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಪೀಠ, ಚುನಾವಣೆಗೆ 8 ವಾರಗಳ ಕಾಲಾವಕಾಶ ನೀಡಿದೆ. ಆದರೆ ಕ್ಷೇತ್ರ ಪುನರ್ ವಿಂಗಡಣೆಯಾಗಲಿ, ಹೊಸ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹಳೇ ಮೀಸಲಾತಿ ಅನ್ವಯ ಅಕ್ಟೋಬರ್ 5ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿದೆ.
ಪ್ರಸ್ತುತ 2001ರ ಜನಗಣತಿ ಪ್ರಕಾರ ಮೀಸಲು ನಿಗದಿ ಮಾಡಲಾಗಿದೆ. ಆದರೆ 2011ರ ಜನಗಣತಿಯಂತೆ ಮೀಸಲು ನಿಗದಿ ಮಾಡಿ ಚುನಾವಣೆ ನಡೆಸಲು ಕಾಲಾವಕಾಶ ನೀಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸೋಮವಾರ ಮೇಲ್ಮನವಿ ಸಲ್ಲಿಸಿತ್ತು.
ಮೇ 5 ರಂದು ಸ್ವತಃ ಸುಪ್ರೀಂಕೋರ್ಟ್ ಮೂರು ತಿಂಗಳ ಒಳಗಾಗಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು. ಆ ಆದೇಶದಂತೆ ರಾಜ್ಯ ಚುನಾವಣಾ ಆಯೋಗ 2001ರ ಜನಗಣತಿ ಆಧಾರದ ಮೇಲೆ ಚುನಾವಣೆ ನಡೆಸಲು ಮುಂದಾಗಿತ್ತು. ಆದರೆ 2011ನೇ ಸಾಲಿನ ಜನಗಣತಿ ಆಧಾರದ ಮೇಲೆ ಮೀಸಲಾತಿ ನಿಗದಿ ಮಾಡದೇ ಇದ್ದರೆ ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಪ್ರಾತಿನಿಧ್ಯ ಕಡಮೆಯಾಗಲಿದ್ದು, ಆ ಸಮುದಾಯಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ದಕ್ಕುವುದಿಲ್ಲ ಎಂದು ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ಅವರು, ಯಾವ ದಿನಾಂಕದಿಂದ 8 ವಾರ ಎಂದು ಗೊತ್ತಾಗಿಲ್ಲ. ಆದೇಶದ ಪ್ರತಿ ಕೈಸೇರಿದ ಬಳಿಕವಷ್ಟೇ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


