ಡಿ.ಕೆ. ರವಿ ನಿಗೂಢ ಸಾವು: ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಕುರಿತು ಸಿಐಡಿ ತನಿಖೆ ಒಪ್ಪಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಕುರಿತು ಸಿಐಡಿ ತನಿಖೆ ಒಪ್ಪಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.
ಪ್ರಕರಣದ ಕುರಿತು ವಿಧಾನಸಭೆಗೆ ಉತ್ತರಿಸಿದ ಸಿಎಂ, ಡಿ.ಕೆ. ರವಿ ಅವರು ಒಬ್ಬ ದಕ್ಷ ಅಧಿಕಾರಿಯಾಗಿದ್ದರು. ಅವರ ಸಾವು ನಮಗೂ ದಿಗ್ಭ್ರಾಂತಿ ಮೂಡಿಸಿದೆ. ಈ ನಿಗೂಢ ಸಾವಿನ ಕುರಿತು ತನಿಖೆ ನಡೆಸಲು ನಮ್ಮ ಪೊಲೀಸರು ಸಮರ್ಥರಾಗಿದ್ದಾರೆ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಹೇಳಿದರು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳು, ಸಿಐಡಿ ಬೇಡ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದವು.
ಇಂದು ಬೆಳಗ್ಗೆ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ವಿಧಾನ ಪರಿಷತ್ ಮತ್ತು ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಇದು ಆತ್ಮಹತ್ಯೆ ಅಲ್ಲ. ಇದೊಂದು ಕೊಲೆ ಎಂದರು. ಅಲ್ಲದೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ರವಿಯಂಥಹ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ. ಭೃಷ್ಟರಿಗೆ ಸಿಂಹ ಸ್ವಪ್ನರಾಗಿದ್ದ ರವಿ ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯ ಹಿಂದೆ ದೊಡ್ಡ ದೊಡ್ಡ ಕೈಗಳಿವೆ. ಸಿಐಡಿ ಇಲ್ಲವೋ ರಾಜ್ಯದ ಪೊಲೀಸರಿಂದ ತನಿಖೆ ನಡೆಸಿದರೆ ಸತ್ಯಾಂಶ ಹೊರಬರುವುದಿಲ್ಲ. ನನಗೆ ರಾಜ್ಯ ಪೊಲೀಸರ ಮೇಲೆ ಗೌರವವಿದೆ. ಆದರೆ ಸರ್ಕಾರ ತನಿಖೆಯನ್ನು ಕೂಡಲೇ ಸಿಬಿಐಗೆ ಒಪ್ಪಿಸಲೇ ಬೇಕು'' ಎಂದು ಆಗ್ರಹಿಸಿದರು. ಇನ್ನು ರವಿ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದಿದ್ದ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶೆಟ್ಟರ್, ತನಿಖೆಗೂ ಮೊದಲೇ ನಗರ ಪೊಲೀಸ್ ಆಯುಕ್ತರು ಆತ್ಮಹತ್ಯೆ ಎಂದು ಹೇಳಿಕೆ ನೀಡಿದ್ದಾರೆ. ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದರು.
ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಜಾರ್ಜ್ ಉತ್ತರ ನೀಡಿದರು. ಆದರೆ ಗೃಹ ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು, ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು, ಡಿ.ಕೆ. ರವಿ ಸಾವಿನಿಂದ ಆಘಾತವಾಗಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿ ಅಲ್ಲ. ಅವರ ಸಾವಿನ ಕುರಿತು ಹಲವು ಅನುಮಾನಗಳಿದ್ದು, ಪ್ರಕರಣವನ್ನು ಸಿಬಿಐ ತನಿಗೆ ವಹಿಸಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


