ಕಾವೇರಿ ಸಮಸ್ಯೆ ಪರಿಶೀಲಿಸುವುದಾಗಿ ಮೋದಿ ಭರವಸೆ: ಮಾಜಿ ಪಿಎಂ ದೇವೇಗೌಡರ ಉಪವಾಸ ಅಂತ್ಯ
ಕಾವೇರಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಮೇಲೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ..

ಬೆಂಗಳೂರು: ಕಾವೇರಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಮೇಲೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಶನಿವಾರ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ ಹಾಗೂ ಅನಂತ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶ ಹೊತ್ತು ದೇವೇಗೌಡರನ್ನು ಭೇಟಿ ಮಾಡಿ ಉಪವಾಸ ನಿಲ್ಲಿಸುವಂತೆ ಮನವಿ ಮಾಡಿದರು. ಸಚಿವರ ಮನವಿಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಉಪವಾಸ ಅಂತ್ಯಗೊಳಿಸಿದರು. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ದೇವೇಗೌಡರು ಮುಂದಿಟ್ಟಿರುವ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವ ಆಶ್ವಾಸನೆಯನ್ನು ಮೋದಿ ನೀಡಿದ್ದಾರೆ.
ಮೈಸೂರಿನಿಂದ ಮಧ್ಯಾಹ್ನ ವಿಧಾನಸೌಧಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ದೇವೇಗೌಡರ ಬಳಿಗೆ ತೆರಳಿ ಆರೋಗ್ಯ ವಿಚಾರಿಸಿದರು. ಅಲ್ಲದೆ, ಉಪವಾಸ ಕೈಬಿಡುವಂತೆ ಮನವಿಯನ್ನೂ ಮಾಡಿದರು.
ಸರ್ವಪಕ್ಷ ಸಭೆಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅದಕ್ಕೆ ದೇವೇಗೌಡ ಅವರು, ನನ್ನ ಹೋರಾಟ ಇಲ್ಲಿಯೇ ಮುಂದುವರಿಯುತ್ತದೆ. ರಾಜ್ಯಕ್ಕೆ ಒಳಿತಾಗುವ ತೀರ್ಮಾನ ಕೈಗೊಳ್ಳಿ ಎಂದು ಸಲಹೆ ನೀಡಿದರು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದರು.
ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ ನೀರು ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಅವಕಾಶ ನೀಡಬಾರದು ಎಂಬ ಮೂರು ಬೇಡಿಕೆಗಳನ್ನು ದೇವೇಗೌಡರು ಕೇಂದ್ರದ ಮುಂದಿಟ್ಟಿದ್ದಾರೆ.
ಕೇಂದ್ರ ಸರ್ಕಾರದಿಂದ ಬಂದಿರುವ ಭರವಸೆಯಿಂದಾಗಿ ಉಪವಾಸ ನಿಲ್ಲಿಸಿದ್ದೇನೆ. ರಾಜ್ಯದ ಜನರಿಗೆ ಆಗಿರುವ ಅನ್ಯಾಯ ಸರಿಪಡಿಸದಿದ್ದರೆ ಹೋರಾಟ ಮುಂದುವರಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ.
ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಹೊರಟ ದೇವೇಗೌಡ ಅವರು ಬಸವನಗುಡಿಯ ಕಾರಂಜಿ ಆಂಜನೇಯ ದೇವಸ್ಥಾನ ಹಾಗೂ ಕೆ.ಆರ್. ರಸ್ತೆಯ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ವಿಧಾನಸೌಧ\ದ ಗಾಂಧಿ ಪ್ರತಿಮೆ ಬಳಿ ನಿರಶನ ಆರಂಭಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


