ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಅಮೆರಿಕಾ ಮನವಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರವನ್ನು ಬಹಳ ಹತ್ತಿರದಿಂದ ಗಮನಿಸುತ್ತಿರುವ ಅಮೆರಿಕಾ, ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಒತ್ತಾಯಿಸಿದೆ.

ವಾಷಿಂಗ್ಟನ್: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರವನ್ನು ಬಹಳ ಹತ್ತಿರದಿಂದ ಗಮನಿಸುತ್ತಿರುವ ಅಮೆರಿಕಾ, ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಒತ್ತಾಯಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇವೆ. ಶಾಂತಿಯುತ ಸದನದ ಹಕ್ಕನ್ನು ರಕ್ಷಿಸುವಂತೆ ಹಾಗೂ ಗೌರವಿಸುವಂತೆ ಭಾರತೀಯ ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ. ಅಲ್ಲದೆ, ಹಿಂಸಾಚಾರದಿಂದ ದೂರ ಉಳಿಯುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಳ್ಳುತ್ತಿದ್ದೇವೆಂದು ಅಮೆರಿಕಾ ವಿದೇಶಾಂಗ ಸಚಿವಾಲಯದ ವಕ್ತಾರ ಹೇಳಿದ್ದಾರೆ.
ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ನೀಡುವುದು ಮತ್ತು ಸಮಾನತೆಯಿಂದ ನೋಡುವುದು ಎರಡೂ ಪ್ರಜಾಪ್ರಭುತ್ವದ ಮೂಲಭೂತ ತತ್ತ್ವಗಳಾಗಿವೆ. ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅನುಗುಣವಾಗಿ ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುವಂತೆ ಭಾರತಕ್ಕೆ ಆಗ್ರಹಿಸುತ್ತಿದ್ದೇವೆಂದು ತಿಳಿಸಿದ್ದಾರೆ.
ಭಾರತದ ನೆರೆಯ ರಾಷ್ಟ್ರಗಳಿಂದ ಅಂದರೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಹಂದಿರುವ 6 ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳಿಗೆ ಭಾರತದ ಪೌರತ್ವ ನೀಡುವ ಮಸೂದೆಯೇ ಪೌರತ್ವ ತಿದ್ದುಪಡಿ ಮಸೂದೆ-2019.
ಹಳೆಯ ಕಾಯ್ದೆಯಲ್ಲಿ ವಿದೇಶಿಗರು ಕಾನೂನು ಬದ್ಧವಾಗಿ ಭಾರತಕ್ಕೆ ವಲಸೆ ಬಂದು ಇಲ್ಲಿ 12 ವರ್ಷ ಅದಕ್ಕಿಂತಲೂ ಹೆಚ್ಚು ವರ್ಷ ನೆಲೆಸಿದ್ದರೆ, ಪೌರತ್ವ ಪಡೆಯಲು ಅರ್ಹರಾಗಿದ್ದರು. ಆದರೆ, ಹೊಸ ತಿದ್ದುಪಡಿ ಕಾಯ್ದೆಯಲ್ಲಿ ಭಾರತಕ್ಕೆ ಮೇಲಿನ ಮೂರು ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದರೂ ಇಲ್ಲಿ 6 ವರ್ಷ ವಾಸಿದ್ದರೆ ಆರು ಧರ್ಮೀಯರು ಭಾರತದ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಇದರ ಅನುಸಾರ 2014ರ ಡಿ.31ರ ಒಳಗೆ ಭಾರತಕ್ಕೆ ವಲಸೆ ಬಂದ ಮುಸ್ಲಿಮೇತರ ನಿರಾಶ್ರಿತರು ಭಾರತದ ಪೌರತ್ವ ಪಡೆಯಲು ಅರ್ಹರು.
ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟಿರುವುದು ಅಥವಾ ಧರ್ಮದ ಆಧಾರದ ಮೇಲೆ ಪೌರತ್ವ ನೀಡುತ್ತಿರುವುದು ಈ ತಿದ್ದುಪಡಿ ವಿರೋಧಕ್ಕೆ ಮೊದಲ ಕಾರಣ. ಇದು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಭಾರತದ ಜಾತ್ಯತೀತ ರಾಷ್ಟ್ರ. ಹಾಗಾಗಿ ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸುತ್ತಿವೆ.
ಹಾಗೆಯೇ ಕೇಂದ್ರ ಸರ್ಕಾರ ನೆರೆಯ ರಾಷ್ಟ್ರಗಳಿಂದ ಕಿರುಕುಳ ಅನುಭವಿಸಿ ವಲಸೆ ಬಂದ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಪೌರತ್ವ ನೀಡುತ್ತಿದ್ದೇವೆಂದು ಹೇಳುತ್ತಿದೆ. ಆದರೆ, ಈ ತಿದ್ದುಪಡಿ ಮಸೂದೆಯು ಎಲ್ಲಾ ಅಲ್ಪ ಸಂಖ್ಯಾತ ಸಮುದಾಯಗಳನ್ನು ಮತ್ತು ಎಲ್ಲಾ ನೆರೆ ರಾಷ್ಟ್ರಗಳನ್ನು ಒಳಗೊಂಡಿಲ್ಲ. ಪಾಕಿಸ್ತಾನದಲ್ಲಿ ಅಹ್ಮದಿಯೂ ಮತ್ತು ಶಿಯಾ ಮುಸ್ಲಿಂ ಸಮುದಾಯಗಳೂ ತಾರತಮ್ಯವನ್ನು ಅನುಭವಿಸುತ್ತಿವೆ. ಬರ್ಮಾದಲ್ಲಿ ರೊಹಿಂಗ್ಯಾ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳ ಅನುಭವಿಸುತ್ತಿದ್ದಾರೆ. ಶ್ರೀಲಂಕಾದಲ್ಲಿ ಹಿಂದುಗಳು, ಕ್ರಿಶ್ಚಿಯನ್ನರು ಮತ್ತು ತಮಿಳರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆಂಬುದು ಮತ್ತೊಂದು ಬದಿಯ ವಾದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


