ಪಾಕಿಸ್ತಾನದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್; 40 ಮಂದಿ ದುರ್ಮರಣ, ಹಲವರಿಗೆ ಗಾಯ..!
ಬಸ್ ತನ್ನ ಪ್ರಯಾಣಿಕರನ್ನು ಮಾತ್ರವಲ್ಲದೆ ಕೆಟ್ಟುಹೋದ ಮತ್ತೊಂದು ಬಸ್‌ನ ಪ್ರಯಾಣಿಕರನ್ನೂ ಹೊತ್ತೊಯ್ಯುತ್ತಿತ್ತು. ಇದರಿಂದ ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದರು.

ಕ್ವೆಟ್ಟಾ: ಪಾಕಿಸ್ತಾನದ ನೈಋತ್ಯ ಭಾಗದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅತಿವೇಗದಲ್ಲಿ ಸಂಚರಿಸುತ್ತಿದ್ದ ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ ದುರ್ಘಟನೆ ಸಂಭವಿಸಿದೆ.
ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳ ಗಡಿಭಾಗದ ಡಾನಾ ಸಾರ್(Dana Sar) ಎಂಬ ದುರ್ಗಮ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಬಲೂಚಿಸ್ತಾನ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ತಿಳಿಸಿದ್ದಾರೆ.
ಬಸ್ ತನ್ನ ಪ್ರಯಾಣಿಕರನ್ನು ಮಾತ್ರವಲ್ಲದೆ ಕೆಟ್ಟುಹೋದ ಮತ್ತೊಂದು ಬಸ್‌ನ ಪ್ರಯಾಣಿಕರನ್ನೂ ಹೊತ್ತೊಯ್ಯುತ್ತಿತ್ತು. ಇದರಿಂದ ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದರು.
ಇದಲ್ಲದೆ, ಬಸ್ ಅತಿವೇಗದಲ್ಲಿ ಸಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಹಲವರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ದುರ್ಗಮ ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿದ್ದು, ಮೃತರ ಗುರುತು ಪತ್ತೆ ಕಾರ್ಯವೂ ಮುಂದುವರಿದಿದೆ.
ಘಟನೆಯ ಬಗ್ಗೆ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ನಡುವೆ ಘಟನೆಗೆ ಬಲೂಚಿಸ್ತಾನದ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಕೂಡ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ರಸ್ತೆ ಅಪಘಾತಗಳು ಪದೇಪದೇ ಸಂಭವಿಸುತ್ತಿವೆ. ಕಳಪೆ ರಸ್ತೆ ವ್ಯವಸ್ಥೆ, ಸಂಚಾರ ನಿಯಮಗಳ ಸಮರ್ಪಕ ಜಾರಿ ಇಲ್ಲದಿರುವುದು, ಅತಿವೇಗದ ಚಾಲನೆ ಹಾಗೂ ಬೆಟ್ಟಗುಡ್ಡ ಪ್ರದೇಶಗಳ ಅಪಾಯಕಾರಿ ರಸ್ತೆಗಳು ಇಂತಹ ದುರಂತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈ ವರ್ಷದ ಮೇ ತಿಂಗಳಲ್ಲಿಯೂ ಪಾಕಿಸ್ತಾನದ ವಾಯುವ್ಯ ಭಾಗದ ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗೆ ಮಿನಿಬಸ್ ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟು, ಐವರು ಗಾಯಗೊಂಡಿದ್ದರು. ಇದೀಗ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



